ಮಡಿಕೇರಿ, ಮೇ 11: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಬೆಂಗಳೂರಿನ ಬಾಲ ಭವನ ಸೊಸೈಟಿ, ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ‘ಪವಾಡ ರಹಸ್ಯ ಬಯಲು ಕಾರ್ಯಕ್ರಮ’ ಏರ್ಪಡಿಸಲಾಗಿತ್ತು.

‘ಯುವ ಜನತೆಯಲ್ಲಿ ವೈಜ್ಞಾನಿಕ ಮನೋಭಾವ ಬೆಳವಣಿಗೆ’ ಕುರಿತು ಮಾಹಿತಿ ನೀಡಿದ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವನೆ ಮೂಲಕ ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.

ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಎನ್. ವೆಂಕಟನಾಯಕ್ ಹಾಗೂ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಕೆ. ನಾಗರಾಜು ವಿವಿಧ ಪ್ರಾತ್ಯಕ್ಷಿಕೆಗಳ ಮೂಲಕ ‘ಪವಾಡ ರಹಸ್ಯ ಬಯಲು ಕಾರ್ಯಕ್ರಮ’ ನಡೆಸಿಕೊಟ್ಟರು. ಮುಖ್ಯ ಶಿಕ್ಷಕರೂ ಆದ ಸಂಪನ್ಮೂಲ ವ್ಯಕ್ತಿ ಎಂ.ಕೆ. ನಾಗರಾಜು, ವಿವಿಧ ರಾಸಾಯನಿಕ ವಸ್ತುಗಳನ್ನು ಬಳಸಿಕೊಂಡು ತಮ್ಮ ಕೈಚಳಕದಿಂದ ಹೇಗೆ ಪವಾಡ ಮಾಡುತ್ತಾರೆ ಎಂಬುದರ ಕುರಿತು ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಟಿ.ಎಸ್. ಅರುಂಧತಿ ಮಾತನಾಡಿದರು. ಪೊನ್ನಂಪೇಟೆ ಶಿಶು ಅಭಿವೃದ್ಧಿ ಇಲಾಖೆಯ ಟಿ.ಎಸ್. ಸೀತಾಲಕ್ಷ್ಮಿ, ಸಹಾಯಕ ಶಿಶು ಕಲ್ಯಾಣಾಭಿವೃದ್ಧಿ ಅಧಿಕಾರಿ ಬಿ. ಶೋಭಾ, ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ಪ್ರಭಾವತಿ ಇತರರು ಇದ್ದರು.