ಮಡಿಕೇರಿ, ಮೇ 15: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಅರ್ಹರಿಗೆ ತಲಪಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಿತು. ಜಿ.ಪಂ. ವ್ಯಾಪ್ತಿಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ತಾಂತ್ರಿಕ ಅಧಿಕಾರಿಗಳು ಇತರರು ಪಾಲ್ಗೊಂಡಿದ್ದರು.
ಮಾಹಿತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಜಿ.ಪಂ. ಸಿಇಓ ಕೆ. ಲಕ್ಷ್ಮಿಪ್ರಿಯಾ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಅರ್ಹರಿಗೆ ತಲಪಿಸುವಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಪಾತ್ರ ಪ್ರಮುಖವಾಗಿದ್ದು, ಆ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದ ಬಡವರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪ್ರಮುಖವಾಗಿದ್ದು, ವೈಯಕ್ತಿಕ ಹಾಗೂ ಸಮುದಾಯ ಕೆಲಸಗಳನ್ನು ನೀಡಿ ಉದ್ಯೋಗ ಕಲ್ಪಿಸುವಂತಾಗಬೇಕು ಎಂದು ಜಿ.ಪಂ. ಸಿಇಓ ಹೇಳಿದರು.
ಜಿ.ಪಂ. ಉಪ ಕಾರ್ಯದರ್ಶಿ ಗುಡೂರು ಭೀಮಸೇನ ಮಾತನಾಡಿ, ಕೇಂದ್ರ ಪುರಸ್ಕøತ ಯೋಜನೆಗಳು ಹಾಗೂ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧಿಸಿದಂತೆ ಹಣಕಾಸು ಹಾಗೂ ತಾಂತ್ರಿಕ ಒಗ್ಗೂಡುವಿಕೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕ್ರಮ ವಹಿಸಬೇಕಿದೆ ಎಂದರು. ವಿವಿಧ ಇಲಾಖೆಗಳ ಹಣಕಾಸಿನ ಮತ್ತು ತಾಂತ್ರಿಕ ನಿರ್ವಹಣೆ ಪಡೆದು, ಉದ್ಯೋಗ ಕಲ್ಪಿಸುವದರ ಜೊತೆಗೆ ವೈಯಕ್ತಿಕ ಸವಲತ್ತು ಒದಗಿಸುವಂತಾಗಬೇಕು ಎಂದರು.
ರಾಷ್ಟ್ರದಲ್ಲಿ ಶೇ.65 ರಷ್ಟು ಜನರು ಕೂಡ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ದಿನಕೂಲಿಯವರನ್ನು ಬಲತ್ಕಾರದಿಂದ ಕೆಲಸ ಮಾಡಿಸುವಂತಿಲ್ಲ ಹಾಗೂ ಕೆಲಸಕ್ಕೆ ಅರ್ಜಿ ಹಾಕಿದವರಿಗೆ ಉದ್ಯೋಗ ಕಲ್ಪಿಸಬೇಕಿದೆ. ಗ್ರಾಮೀಣ ಪ್ರದೇಶದ ಬಡಜನರಿಗೆ ಒಂದು ವರ್ಷದಲ್ಲಿ ಕನಿಷ್ಟ ನೂರು ದಿನ ಕೂಲಿ ನೀಡುವದು ಮುಖ್ಯವಾಗಿದೆ ಎಂದು ತಿಳಿಸಿದರು.
ಈ ಯೋಜನೆಗೆ ಗ್ರಾ.ಪಂ. ಪಿ.ಡಿ.ಓ.ಗಳು ಪ್ರಮುಖ ರುವಾರಿಯಾಗಿದ್ದು, ಹೆಚ್ಚಿನ ಜವಾಬ್ದಾರಿ ಹೊಂದಿದ್ದಾರೆ. ಹಾಗೆಯೇ ಸರ್ಕಾರೇತರ ಸಂಘ-ಸಂಸ್ಥೆಗಳ ಸಹಯೋಗ ಕೂಡ ಅತೀ ಅಗತ್ಯವಾಗಿದ್ದು, ಸಹಭಾಗಿತ್ವದಿಂದ ಕಾರ್ಯ ಯೋಜನೆಯನ್ನು ರೂಪಿಸುವ ಮೂಲಕ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ತಿಳಿಸಿದರು. ಕಾರ್ಯಾಗಾರದಲ್ಲಿ ಜಿ.ಪಂ. ಸಹಾಯಕ ಕಾರ್ಯದರ್ಶಿ ಬಾಬು, ಶ್ರೀಕಂಠಮೂರ್ತಿ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.