ಜಿ.ಪಂ. ಸದಸ್ಯರ ಮುಂದಾಳತ್ವದಲ್ಲಿ ಜಿಲ್ಲಾಧಿಕಾರಿ ಭೇಟಿ
ಗೋಣಿಕೊಪ್ಪಲು, ಮೇ 16: ಗೋಣಿಕೊಪ್ಪಲುವಿನ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಗೋಣಿಕೊಪ್ಪಲುವಿನ ಜಿಲ್ಲಾ ಪಂಚಾಯಿತಿ ಸದಸ್ಯ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ ಹಾಗೂ ಪೊನ್ನಂಪೇಟೆ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀಜಾ ಸಾಜಿ ಅಚ್ಚುತ್ತನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮಿಪ್ರಿಯ ಹಾಗೂ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡುವ ಮೂಲಕ ನಗರದ ಕಸ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದರು.
ನಗರದ ಅಭಿವೃದ್ಧಿಯ ವಿಚಾರದಲ್ಲಿ ಹಾಗೂ ಕಸ ಸಮಸ್ಯೆಯಿಂದ ಮುಂದಾಗಬಹುದಾದ ಅನಾಹುತವನ್ನು ಗಮನದಲ್ಲಿಟ್ಟುಕೊಂಡು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ ಅಧಿಕಾರಿಗಳಿಗೆ ಇಲ್ಲಿಯ ಸಮಸ್ಯೆಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು.
ಅಧಿಕಾರಿಗಳ ಸಭೆ ನಡೆಸಿದ ಸಂದರ್ಭ ನಗರದಲ್ಲಿರುವ ಕಸ ವಿಲೇವಾರಿಗೆ ಅರುವತೋಕ್ಲು ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಟ್ಟು ಮೀಸಲು ಜಾಗದ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮಾಹಿತಿ ಒದಗಿಸಿದ ಸದಸ್ಯರು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳು ಸದಸ್ಯರ ಮನವಿಗೆ ಸ್ಪಂದಿಸಿ ವೀರಾಜಪೇಟೆ ತಾಲೂಕಿನ ದಂಡಾಧಿಕಾರಿಗಳನ್ನು ಕೂಡಲೇ ಸ್ಥಳಕ್ಕೆ ಕಳುಹಿಸಿಕೊಡುವದಾಗಿ, ವರದಿ ಬಂದ ನಂತರ ಕ್ರಮ ಕೈಗೊಳ್ಳುವ ಬರವಸೆ ನೀಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿಪ್ರೀಯ ಅವರು ಅಧಿಕಾರಿಗಳೊಂದಿಗೆ ವಾರದೊಳಗೆ ಅರುವತೋಕ್ಲು ಪಂಚಾಯಿತಿಯ ಹಳ್ಳಿಗಟ್ಟು ಕಸ ವಿಲೇವಾರಿ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಭೇಟಿಯ ಸಂದರ್ಭ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮೂಕಳೇರ ಸುಮಿತಾ ಗಣೇಶ್ ಉಪಸ್ಥಿತರಿದ್ದರು. - ಹೆಚ್.ಕೆ. ಜಗದೀಶ್