ಮಡಿಕೇರಿ, ಮೇ 16: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಜರುಗಿತು.

ಸಭೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಅಪಘಾತ ನಿಯಂತ್ರಿಸುವ ನಿಟ್ಟಿನಲ್ಲಿ ಸಾಕಷ್ಟು ಕಾರ್ಯ ಯೋಜನೆ ರೂಪಿಸಬೇಕಿದ್ದು, ಆ ನಿಟ್ಟಿನಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಗಂಗಾಧರ ತಿಳಿಸಿದರು.

ರಾಜಾಸೀಟ್ ಬಳಿ ವಾಹನ ನಿಲುಗಡೆ ವ್ಯವಸ್ಥೆ, ಗೋಣಿಕೊಪ್ಪ ಮತ್ತು ಕುಶಾಲನಗರ ಪಟ್ಟಣಗಳಲ್ಲಿ ಈಗಾಗಲೇ ಏಕಮುಖ ಸಂಚಾರಕ್ಕಾಗಿ ಅಧಿಸೂಚನೆ ಹೊರಡಿಸಿದ್ದು, ಈ ಪಟ್ಟಣಗಳಲ್ಲಿ ಸುಗಮ ಸಂಚಾರಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವದು ಹಾಗೂ ಮುಂಬರುವ ವರ್ಷಗಳಲ್ಲಿ ಅಪಘಾತ ನಿಯಂತ್ರಿಸಲು ಟ್ರಾಫಿಕ್ ಸಿಗ್ನಲ್ ಬೋರ್ಡ್ ಅಳವಡಿಕೆ, ಜನರಲ್ ತಿಮ್ಮಯ್ಯ ವೃತ್ತದಲ್ಲಿ ಎಲೆಕ್ಟ್ರಾನಿಕ್ ಸಿಗ್ನಲ್ ಲೈಟ್ ಅಳವಡಿಕೆ ಇನ್ನಿತರ ಕಾರ್ಯಯೋಜನೆ ಹಮ್ಮಿಕೊಳ್ಳಲಾಗಿರುತ್ತದೆ ಎಂದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜೆ.ಪಿ.ಗಂಗಾಧರ, ಪೌರಾಯುಕ್ತರು, ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು ಹಾಜರಿದ್ದರು.