ಮಡಿಕೇರಿ, ಮೇ 20 : ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಧೂಮಪಾನ ನಿಷೇಧಿತ ಪ್ರದೇಶ ಎಂಬ ಫಲಕವನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸದಸ್ಯ ಕಾರ್ಯದರ್ಶಿಯವರಿಗೆ ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲೂಕು ಮತ್ತು ಜಿಲ್ಲಾ ಮಟ್ಟದ ಕೋಟ್ಪಾ ಕಾಯ್ದೆಯನ್ವಯ ತಾಲೂಕು ಮತ್ತು ಜಿಲ್ಲಾ ಮಟ್ಟದ ತನಿಖಾ ತಂಡದ ಸದಸ್ಯರುಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಸಿ ಕಾಯ್ದೆಯನ್ವಯ ಅನುಸರಿಸಬೇಕಾದ ಮಾನದಂಡದ ಬಗ್ಗೆ ಮಾಹಿತಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ, ವ್ಯಾಪ್ತಿಗಳಲ್ಲಿ ಅಂಗಡಿಗಳ ಪರವಾನಗಿ ನೀಡುವ ಸಂದರ್ಭದಲ್ಲಿ ಕೋಟ್ಪಾ ಕಾಯ್ದೆಯ ಮಾನದಂಡಗಳನ್ನು ಉಲ್ಲೇಖಿಸಿ ಪರವಾನಗಿ ನೀಡಲು ಕ್ರಮಕೈಗೊಳ್ಳುವಂತೆ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಮೋಹನ್ ಅವರು ಜಿಲ್ಲೆಯಲ್ಲಿ ಇದುವರೆಗೂ ಕೋಟ್ಪಾ ಕಾಯ್ದೆಯಡಿ ದಾಳಿ ಮಾಡಿರುವ ಹಾಗೂ ದಂಡ ವಿಧಿಸಿರುವ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾ ಘಟಕದ ಡಾ.ಶಿವಕುಮಾರ್, ನಗರಸಭೆ ಆಯುಕ್ತರಾದ ರಮೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆಂಚಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.