ಮಡಿಕೇರಿ, ಮೇ 20 : ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಹೇಳಿಕೆ ನೀಡುವ ಮೂಲಕ ದೇಶದ ಶಾಂತಿ ಕದಡುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಜೆಡಿಎಸ್ ಪ್ರತಿಭಟನೆ ನಡೆಸಿತು.
ನಗರದ ಗಾಂಧಿ ಮೈದಾನದಲ್ಲಿ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ನಾಯಕಿ ಪ್ರಜ್ಞಾಸಿಂಗ್, ಸಂಸದ ನಳಿನ್ ಕುಮಾರ್ಕಟೀಲ್, ಅನಂತ ಕುಮಾರ್ ಹೆಗ್ಡೆ ವಿರುದ್ಧ ದಿಕ್ಕಾರ ಘೋಷಣೆ ಕೂಗಿದರು.
ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆಎಂಬಿ ಗಣೇಶ್ ಮಾತನಾಡಿ, ಬಿಜೆಪಿ ನಾಯಕಿ ಪ್ರಜ್ಞಾ ಸಿಂಗ್ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂಬ ಹೇಳಿಕೆ ನೀಡುವ ಮೂಲಕ ಸಮಾಜದ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಸಂಸದ ನಳಿನ್ ಕುಮಾರ್ ಕಟೀಲ್, ಅನಂತ್ ಕುಮಾರ್ ಹೆಗ್ಡೆ ಹೇಳಿಕೆಯನ್ನು ಬಿಜೆಪಿ ಸಮರ್ಥಿಸಿಕೊಳ್ಳುತ್ತಿರುವದು ವಿಷಾದನೀಯ ಎಂದರು.
ಪ್ರತಿಭಟನೆ ಸಂದರ್ಭ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಶಾಂತಿ ಅಚ್ಚಪ್ಪ, ಯುವ ಘಟಕ ಜಿಲ್ಲಾಧ್ಯಕ್ಷ ವಿಶ್ವ, ಪ್ರಧಾನ ಕಾರ್ಯದರ್ಶಿ ಜಾಸೀರ್, ಜಿಲ್ಲಾ ಉಪಾಧ್ಯಕ್ಷ ಗೌತಮ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ನಾಗರಾಜ್, ಅಲ್ಪಸಂಖ್ಯಾತ ಘಟಕಾಧ್ಯಕ್ಷ ಇಸಾಖಾನ್, ಮುಖಂಡರಾದ ಪಾಣತ್ತಲೆ ವಿಶ್ವನಾಥ್, ರವಿಕಿರಣ್, ಗಣೇಶ್, ಮುತ್ತಪ್ಪ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.