ಮಡಿಕೇರಿ, ಜೂ. 1: ಲೋಕಸಭಾ ಚುನಾವಣೆ ಸೋಲಿನ ಹಿನ್ನೆಲೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಕೈಗೊಂಡಿರುವ ರಾಹುಲ್ ಗಾಂಧಿ ಅವರು ಅದೇ ಹುದ್ದೆಯಲ್ಲಿ ಮುಂದುವರಿ ಯಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನಿರ್ಣಯ ಕೈಗೊಂಡು ಎಐಸಿಸಿ ಮತ್ತು ಕೆಪಿಸಿಸಿಗೆ ಕಳುಹಿಸಿಕೊಟ್ಟಿದೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ರಾಹುಲ್ ಗಾಂಧಿ ಪರ ಒಲವು ವ್ಯಕ್ತಪಡಿಸ ಲಾಯಿತು. ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಕೆಪಿಸಿಸಿ ಸದಸ್ಯ ಟಿ.ಪಿ. ರಮೇಶ್ ಇವರುಗಳು ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ, ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷ ಸತೀಶ್ ಕುಮಾರ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲೋಕೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕÀ ತೆನ್ನಿರ ಮೈನಾ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ನಗರಾಧ್ಯಕ್ಷೆ ಪಾರ್ವತಿ ಫ್ಯಾನ್ಸಿ ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.