ಸೋಮವಾರಪೇಟೆ, ಜೂ. 1: ತಂಬಾಕು ತ್ಯಜಿಸಿ ಉತ್ತಮ ಆರೋಗ್ಯ ಮತ್ತು ಜೀವನ ರೂಪಿಸಿಕೊಳ್ಳಬೇಕು ಎಂದು ಇಲ್ಲಿನ ಜೆಎಂಎಫ್ಸಿಯ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್. ದಿಂಡಲಕೊಪ್ಪ ಶಿವಪುತ್ರ ಕರೆ ನೀಡಿದರು.
ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆರೋಗ್ಯಾಧಿ ಕಾರಿಗಳ ಕಚೇರಿ ಹಾಗೂ ವಕೀಲರ ಸಂಘದ ವತಿಯಿಂದ ಇಲ್ಲಿನ ಸಂತ ಜೋಸೆಫರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳನ್ನು ಅರಳುವ ಹೂವುಗಳಿಗೆ ಹೋಲಿಸಿದ ನ್ಯಾಯಾಧೀಶರು, ದುಶ್ಚಟಗಳಿಗೆ ಬಲಿಯಾಗಿ ಭವಿಷ್ಯ ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ತಮ್ಮ ವ್ಯಾಪ್ತಿಯೊಳಗೆ ಜಾಗೃತಿ ಮೂಡಿಸಬೇಕು.
ಆರೋಗ್ಯವಂತ ಸಮಾಜವನ್ನು ಸೃಷ್ಟಿಸುವತ್ತ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.
ಸಾರ್ವಜನಿಕವಾಗಿ ಧೂಮಪಾನ ಮಾಡುವವರು ಕಂಡಾಗ ಅವರಿಗೆ ತಿಳಿಹೇಳಬೇಕು. ಆರೋಗ್ಯದ ಮೇಲಾಗುವ ದುಷ್ಪರಿಣಾಮದ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಉತ್ತಮ ಸಲಹೆಯ ಮೂಲಕ ಮನಪರಿವರ್ತನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರತಿಭಾ, ವಕೀಲರ ಸಂಘದ ಅಧ್ಯಕ್ಷ ಡಿ.ಕೆ. ತಿಮ್ಮಯ್ಯ, ತಾಲೂಕು ಆರೋಗ್ಯಾಧಿಕಾರಿ ಶ್ರೀನಿವಾಸ್, ಧರ್ಮ ಗುರುಗಳಾದ ರಾಯಪ್ಪ, ಅಂತೋಣಿರಾಜ್ ಉಪಸ್ಥಿತರಿದ್ದರು. ವಕೀಲರಾದ ಎಸ್.ಎಸ್. ಮನೋಹರ್, ಚಂದ್ರಶೇಖರ್ ಉಪನ್ಯಾಸ ನೀಡಿದರು. ಆರೋಗ್ಯ ಇಲಾಖೆಯ ಮೇಲ್ವಿಚಾರಕಿ ಶಾಂತಿ ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ವಿವೇಕಾನಂದ ವೃತ್ತದಿಂದ ಕಾಲೇಜಿನವರೆಗೆ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರಿಂದ ಜಾಗೃತಿ ಜಾಥಾ ನಡೆಯಿತು.