ಸೋಮವಾರಪೇಟೆ,ಮೇ.31: ಮುಚ್ಚುತ್ತಿರುವ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ ತರಗತಿಗಳನ್ನು ಪ್ರಾರಂಭಿಸಲು ಆದೇಶ ನೀಡಿರುವ ಹಿನ್ನೆಲೆ ಇಲ್ಲಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಗೆ ಈಗಾಗಲೇ 22 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.
ಮಕ್ಕಳ ಕೊರತೆ ಎದುರಿಸುತ್ತಿದ್ದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ಎಲ್‍ಕೆಜಿ ತರಗತಿ ಪ್ರಾರಂಭಿಸಲು ಶಿಕ್ಷಕರು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಜೂನ್ 3 ರಂದು ಅಧಿಕೃತವಾಗಿ ಎಲ್‍ಕೆಜಿ ತರಗತಿಗಳು ಪ್ರಾರಂಭಗೊಳ್ಳಲಿವೆ.
ಶಾಲೆಯಲ್ಲಿ ವಿದ್ಯಾರ್ಥಿಗಳ ಕೊರತೆ ನೀಗಲು ಆಂಗ್ಲಮಾಧ್ಯಮ ತರಗತಿ ಮುಖ್ಯವಾಗಿದೆ. ತರಗತಿಗೆ ತಮ್ಮ ಮಕ್ಕಳನ್ನು ಸೇರಿಸಲು ಪೋಷಕರು ಹೆಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ. ಈಗಾಗಲೇ 22 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದು, ಮುಂದೆ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ ತಿಳಿಸಿದ್ದಾರೆ.
ಜೂ.3ರಂದು ಎಲ್‍ಕೆಜಿ ಪ್ರಾರಂಭೋತ್ಸವ ನಡೆಯಲಿದ್ದು, ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಗೋಪಾಲ್, ತಾಲೂಕು ಪಂಚಾಯಿತಿ ಸದಸ್ಯೆ ತಂಗಮ್ಮ, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮ್ಯ ಕರುಣಾಕರ, ಸದಸ್ಯ ನತೀಶ್ ಮಂದಣ್ಣ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕುಶಾಲ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ ಅವರುಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.