ಸೋಮವಾರಪೇಟೆ, ಜೂ. 2: ಸಾಮಾಜಿಕ ಜಾಗೃತಿ ಮತ್ತು ಅಭಿವೃದ್ಧಿಯಲ್ಲಿ ಮಠ ಮಾನ್ಯಗಳ ಕೊಡುಗೆ ಅಪಾರವಾಗಿದ್ದು, ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಧಾರ್ಮಿಕ ವಿಚಾರ ಜಾಗೃಗೊಳ್ಳಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯಿಸಿದರು.

ಇಲ್ಲಿನ ವಿರಕ್ತ ಮಠದಲ್ಲಿ ಆಯೋಜಿಸಿದ್ದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳ 32ನೇ ಪುಣ್ಯಾರಾಧನೆ ಮತ್ತು ಜಗಜ್ಯೋತಿ ಬಸವೇಶ್ವರ ಜಯಂತಿ ಹಾಗೂ ವಟುಗಳಿಗೆ ಲಿಂಗ ದೀಕ್ಷಾ ಮಹೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.(ಮೊದಲ ಪುಟದಿಂದ) 12ನೇ ಶತಮಾನದಲ್ಲಿಯೇ ಬಸವಣ್ಣ ಅವರು ಅನುಭವ ಮಂಟಪ ರಚಿಸುವ ಮೂಲಕ ಆಧುನಿಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ್ದರು. ಜಾತಿ, ಮತ, ಭೇದವಿಲ್ಲದೇ ಸಾಮಾಜಿಕ ಜಾಗೃತಿ ಮೂಡಿಸಿದ್ದರು ಎಂದರು.

ಸಾನ್ನಿಧ್ಯ ವಹಿಸಿದ್ದ ಶ್ರೀ ಮುರುಘಾ ಬೃಹನ್ಮಠದ ಪೀಠಾಧ್ಯಕ್ಷ ಶ್ರೀ ಮುರುಘ ರಾಜೇಂದ್ರ ಸ್ವಾಮೀಜಿ ಮಾತನಾಡಿ, ಮುಂದಿನ ದಿನಗಳಲ್ಲಿ ಕೊಡಗಿನಲ್ಲಿ ಉನ್ನತ ಮಟ್ಟದ ವಸತಿ ಶಾಲೆ ನಿರ್ಮಿಸುವ ಯೋಜನೆಯಿದೆ. ವಿರಕ್ತ ಮಠಕ್ಕೆ ಕಾಯಕಲ್ಪ ನೀಡುವ ಮೂಲಕ ಧಾರ್ಮಿಕ ಕ್ಷೇತ್ರವನ್ನಾಗಿ ರೂಪುಗೊಳಿಸಲಾಗುವದು. ಇದರೊಂದಿಗೆ ಸಮಾಜಕ್ಕೆ ಉಪಯೋಗ ಕಲ್ಪಿಸುವ ನಿಟ್ಟಿನಲ್ಲಿ ಸಮುದಾಯ ಭವನ ನಿರ್ಮಿಸಲಾಗುವದು ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಧಾರ್ಮಿಕ ತಳಹದಿಯಿಂದ ಪ್ರಬುದ್ಧಗೊಂಡಿರುವ ಭಾರತ ದೇಶ, ಇಡೀ ವಿಶ್ವದ ಗಮನ ಸೆಳೆದಿದೆ. ಧರ್ಮ ಸಂಸ್ಕಾರಕ್ಕೆ ವಚನಗಳು ಬುನಾದಿಯಾಗಿದ್ದು, ಮಕ್ಕಳಲ್ಲಿ ಮಾನವೀಯ ಗುಣಗಳನ್ನು ಮೂಡಿಸಬೇಕು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಿರಕ್ತ ಮಠಾಧೀಶ ಶ್ರೀ ವಿಶ್ವೇಶ್ವರ ಸ್ವಾಮೀಜಿ ವಹಿಸಿದ್ದರು. ವೇದಿಕೆಯಲ್ಲಿ ದಾವಣಗೆರೆ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ, ರಾವಂದೂರು ಮಠದ ಶ್ರೀ ಮೋಕ್ಷಪತಿ ಸ್ವಾಮೀಜಿ, ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಲ್ಲಹಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ತೊರೆನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಶಿಡುಗಳಲೆ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಶಿರದಹಳ್ಳಿ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ವೀರಶೈವ ಸಮಾಜz ಕೆ.ಎನ್. ಶಿವಕುಮಾರ್, ಕೆ.ಎನ್. ತೇಜಸ್ವಿ, ಅಕ್ಕನಬಳಗದ ಅಧ್ಯಕ್ಷೆ ಜಲಜಾ ಶೇಖರ್, ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ತಾಲೂಕು ಅಧ್ಯಕ್ಷ ಮಹಾದೇವಪ್ಪ, ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಕೆ.ಬಿ. ಹಾಲಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಮನಾಥಪುರ ಶಿರದನಹಳ್ಳಿ ಮಠಾಧೀಶ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಲಿಂಗಾಯತ ವಟುಗಳಿಗೆ ಲಿಂಗ ದೀಕ್ಷಾ ಸಂಸ್ಕಾರಗಳು ಜರುಗಿದವು. ಅರಸೀಕೆರೆಯ ಬಸವಲಿಂಗ ಶಿವಯೋಗಿ ಭಜನಾಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.