ಮಡಿಕೇರಿ, ಜೂ. 3: ಕೊಡಗು ಜಿಲ್ಲೆಯ ಹೋಂ ಸ್ಟೇಗಳಲ್ಲಿ ಪ್ರವಾಸಿಗರ ವಾಸ್ತವ್ಯ ಸಂಬಂಧಿಸಿದಂತೆ ಜಿಲ್ಲಾಡಳಿತ ಇದುವರೆಗೆ ಯಾವದೇ ರೀತಿಯ ಪ್ರಕಟಣೆ ಹೊರಡಿಸಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸ್ಪಷ್ಟ ಪಡಿಸಿದ್ದಾರೆ.ಕೊಡಗು ಜಿಲ್ಲಾ ರೆಸಾರ್ಟ್, ಹೊಟೇಲ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಂಘದ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಅವರ ನೇತೃತ್ವದಲ್ಲಿ ನಿಯೋಗ ಭೇಟಿ ಮಾಡಿ ಕೆಲ ಮಾಧ್ಯಮಗಳಲ್ಲಿ ಕೊಡಗು ಬಗ್ಗೆ ಬರುತ್ತಿರುವ ಸುದ್ದಿ ಕುರಿತು ಆತಂಕ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳು ಸಮಜಾಯಿಷಿಕೆ ನೀಡುವಂತೆ ವಿನಂತಿಸಿತು.ಜಿಲ್ಲೆಯ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾದ ಮಕ್ಕಂದೂರು ಗ್ರಾ.ಪಂ. ವ್ಯಾಪ್ತಿಯ ಹೋಂ ಸ್ಟೇಗಳಲ್ಲಿ ಮಳೆಗಾಲದ ಅವಧಿಯಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ಅವಕಾಶವಿಲ್ಲವೆಂದು ವಿಶೇಷ ಗ್ರಾಮ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದು ಆ ಗ್ರಾ.ಪಂ. ವ್ಯಾಪ್ತಿಗೆ ಸೀಮಿತವಾಗಿದೆ. ವಿಶೇಷ ಗ್ರಾಮ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ವಾಗಿದೆ. ಆದರೆ ಜಿಲ್ಲಾಡಳಿತದಿಂದ ಯಾವುದೇ ರೀತಿಯ ಪ್ರಕಟಣೆ ಹೊರಡಿಸಿಲ್ಲ. ಮುಂದಿನ ಮಳೆಗಾಲ ಗಮನಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬದವರನ್ನು ಖಾಲಿ ಮಾಡುವಂತೆ ಜಿಲ್ಲಾಡಳಿತ ಹೇಳಿಲ್ಲ. ಆದರೆ ಮಳೆಗಾಲದ ಸಂದರ್ಭದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಈಗಾಗಲೇ ಉನ್ನತ ಮಟ್ಟದ ವಿಜ್ಞಾನಿಗಳು ಜಿಲ್ಲೆಯ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕಿನ ಆಯ್ದ 35 ಗ್ರಾಮಗಳನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ದ್ದಾರೆ. ಹಾಗೆಯೇ 13 ಪ್ರದೇಶಗಳನ್ನು ಅತೀ ಸೂಕ್ಷ್ಮ ಪ್ರದೇಶವೆಂದು ಗುರುತಿಸಿದ್ದಾರೆ. ಆ ನಿಟ್ಟಿನಲ್ಲಿ ಈ ಸೂಕ್ಷ್ಮ ಪ್ರದೇಶಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಈ ಗ್ರಾ.ಪಂ.ವ್ಯಾಪ್ತಿಗಳಲ್ಲಿ ವಿಶೇಷ ಗ್ರಾಮಸಭೆಗಳನ್ನು ನಡೆಸಲಾಗುತ್ತಿದೆ ಎಂದು ಅನೀಸ್ ಕಣ್ಮಣಿ ಜಾಯ್ ಅವರು ನುಡಿದರು.