ಸೋಮವಾರಪೇಟೆ, ಜೂ. 8: ಕನ್ನಡ ಸಾಹಿತ್ಯ ಪರಿಷತ್‍ನ ಜಿಲ್ಲೆ ಮತ್ತು ತಾಲೂಕು ಘಟಕದ ವತಿಯಿಂದ ಶಾಂತಳ್ಳಿ ಶ್ರೀಕುಮಾರ ಲಿಂಗೇಶ್ವರ ದೇವಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 7 ನಿರ್ಣಯಗಳನ್ನು ಮಂಡಿಸಲಾಯಿತು.

ಕುರಾದ ಗೌಡನ ದೊಡ್ಡಯ್ಯ ಪ್ರಧಾನ ವೇದಿಕೆಯಲ್ಲಿ ಕಸಾಪ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ಅಧ್ಯಕ್ಷತೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಕಸಾಪ ತಾಲೂಕು ಗೌರವ ಕಾರ್ಯದರ್ಶಿ ಕೆ.ಎ. ಆದಂ ಅವರು ನಿರ್ಣಯಗಳನ್ನು ಮಂಡಿಸಿದರು.

ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಬಹುದಿನಗಳ ಬೇಡಿಕೆಯಾದ ಬಿಸಿಎಂ ವಿದ್ಯಾರ್ಥಿ ವಸತಿ ನಿಲಯ ಸ್ಥಾಪನೆ, ನಾಡ್ನಳ್ಳಿ, ಕಾಕಲುಕೊಪ್ಪ ಮತ್ತು ಮಲ್ಲಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ, ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಗಳನ್ನು ಪ್ರವಾಸೋದ್ಯಮ ಇಲಾಖೆಯಿಂದ ಕಲ್ಪಿಸಬೇಕು, ಇದರೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಎಂಬ ನಿರ್ಣಯ ಅಂಗೀಕರಿಸಲಾಯಿತು.

ತಲ್ತರೆಶೆಟ್ಟಳ್ಳಿ ಗ್ರಾಮದಲ್ಲಿರುವ ಕಡಳ್ಳಿಕಂಡಿ ಜಲಪಾತಕ್ಕೆ ಮೂಲ ಭೂತ ಸೌಕರ್ಯ ಕಲ್ಪಿಸಿ, ಪ್ರವಾಸಿ ತಾಣವಾಗಿ ಮೇಲ್ದರ್ಜೆಗೇ ರಿಸಬೇಕು. ಹೋಬಳಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಸ್ ಎನ್‍ಎಲ್ ಕೇಂದ್ರವನ್ನು ಉನ್ನತೀಕರಿಸಬೇಕು. ವಿದ್ಯಾರ್ಥಿಗಳು ಶಾಲೆಗೆ ತೆರಳಲು ಅನುಕೂಲವಾಗು ವಂತೆ ಅಗತ್ಯ ಸರ್ಕಾರಿ ಬಸ್‍ಗಳನ್ನು ಒದಗಿಸಬೇಕು. ಸರ್ಕಾರಿ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬ 7 ನಿರ್ಣಯಗಳನ್ನು ಅಂಗೀಕರಿಸಿ ಸರ್ಕಾರಕ್ಕೆ ಸಲ್ಲಿಸಲು ಸಮ್ಮೇಳನದಲ್ಲಿ ತೀರ್ಮಾನಿಸಲಾಯಿತು.