ಗೋಣಿಕೊಪ್ಪಲು, ಜೂ.10: ಜಿಲ್ಲೆಯ ರೈತರ ಸಮಸ್ಯೆಗಳನ್ನು ಆಲಿಸಲು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆಯನ್ನು ಆಯೋಜಿಸುವಂತೆ ರೈತ ಸಂಘ ಹಾಗೂ ಹಸಿರು ಸೇನೆಯು ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಶ್ ಸುಬ್ಬಯ್ಯ ಮುಂದಾಳತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಕಳೆದ ವರ್ಷ ಭೂಕುಸಿತದಿಂದ ನೊಂದ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿವಿಧ ಇಲಾಖಾ ಅಧಿಕಾರಿಗಳ ಜೊತೆ ಸಂವಾದ ಕಾರ್ಯಕ್ರಮ ನಡೆಸುವದು ಸೇರಿದಂತೆ ವೀರಾಜಪೇಟೆ ತಾಲೂಕು ಕಚೇರಿಯಲ್ಲಿ ರೈತರು ಮತ್ತು ನಾಗರಿಕರ ಕಡತಗಳು (ಆರ್.ಟಿ.ಸಿ, ಪೌತಿಖಾತೆ, ಸರ್ವೇ) ವಿಲೇವಾರಿಯಾಗದೇ ನೆನೆಗುದಿಗೆ ಬಿದ್ದಿರುವದು,
ಪಹಣಿಖಾತೆ ಗೊಂದಲ ನಿವಾರಿಸಬೇಕು. ಆರ್.ಟಿ.ಸಿ ಗೊಂದಲದಿಂದ ರೈತರಿಗೆ ಯಾವದೇ ಸಹಕಾರಿ ಬ್ಯಾಂಕ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸಾಲ ಮಂಜುರಾತಿ ಸಾಧ್ಯವಾಗುತ್ತಿಲ್ಲ. ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಕಟ್ಟಲು ತೊಂದರೆ ಸೇರಿದಂತೆ ರೈತರ ಸಮಸ್ಯೆಗಳನ್ನು ಆಲಿಸಲು ರೈತರ ಸಭೆ ನಡೆಸುವಂತೆ ಮನವಿ ಮಾಡಿದರು. ಈ ವೇಳೆ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಪೊನ್ನಂಪೇಟೆ ಹೋಬಳಿ ಸಂಚಾಲಕ ಆಲೆಮಾಡ ಮಂಜುನಾಥ್, ನಲ್ಲೂರು ರೈತ ಮುಖಂಡ ರಾಜ ಹಾಜರಿದ್ದರು.