ಕುಶಾಲನಗರ, ಜೂ. 11: ಗಿಡಗಳನ್ನು ನೆಟ್ಟು ಪೋಷಣೆ ಮಾಡುವ ಮೂಲಕ ಉತ್ತಮ ಪರಿಸರ ನಿರ್ಮಾಣ ಎಲ್ಲರ ಕರ್ತವ್ಯವಾಗಿದೆ ಎಂದು ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್.ಚಿಣ್ಣಪ್ಪ ತಿಳಿಸಿದ್ದಾರೆ. ಕಾವೇರಿ ಪರಿಸರ ರಕ್ಷಣಾ ಬಳಗ ಆಶ್ರಯದಲ್ಲಿ ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಳೆದು ನಿಂತ ನೆರಳು ಮರಗಳ ನಿರ್ವಹಣೆ ಕಾರ್ಯಕ್ಕೆ ಚಾಲನೆ ನೀಡಿ ಅವರು ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು. ವಿದ್ಯಾರ್ಥಿ ದಿಸೆಯಲ್ಲಿ ಮಕ್ಕಳು ಗಿಡ ಮರಗಳ ಉಪಯುಕ್ತತೆ ಬಗ್ಗೆ ಅರಿವು ಹೊಂದಬೇಕು. ಇರುವ ಪರಿಸರವನ್ನು ಕಾಪಾಡಿಕೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕೆಂದರು.

ಈ ಸಂದರ್ಭ ಪ್ರಾಸ್ತಾವಿಕವಾಗಿ ಮಾತನಾಡಿದ ಕಾವೇರಿ ಪರಿಸರ ರಕ್ಷಣಾ ಬಳಗದ ಸಂಚಾಲಕರಾದ ಎಂ.ಎನ್.ಚಂದ್ರಮೋಹನ್, ವಿದ್ಯಾರ್ಥಿಗಳಿಗೆ ಗಿಡಗಳ ಮಹತ್ವದ ಬಗ್ಗೆ ಹಾಗೂ ನೆರಳು ಗಿಡಗಳ ತಳಿಗಳ ಬಗ್ಗೆ ಮಾಹಿತಿ ಒದಗಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ರಾಣಿ ಅವರು ಮಾತನಾಡಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ.ಟಿ.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪರಿಸರ ರಕ್ಷಣಾ ಬಳಗದ ಪ್ರಮುಖರಾದ ಡಿ.ಆರ್. ಸೋಮಶೇಖರ್, ಶಾಲೆಯ ಶಿಕ್ಷಕರು ಇದ್ದರು. ಶಾಲಾ ಆವರಣದಲ್ಲಿ ಬೆಳೆದು ನಿಂತಿದ್ದ ಮರಗಳ ನಿರ್ವಹಣೆ ಹಾಗೂ ಆವರಣದಲ್ಲಿ ಗಿಡ ನೆಡಲಾಯಿತು.