ಮಡಿಕೇರಿ, ಜೂ. 11: ಪ್ರಾಕೃತಿಕ ವಿಕೋಪದಿಂದ ಕೊಡಗು ಜಿಲ್ಲೆಯಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದರೂ, ಈ ಬಾರಿ ವಿದ್ಯಾರ್ಥಿಗಳು ಶೈಕ್ಷಣಿಕ ಗುರಿಯನ್ನು ಸಾಧಿಸಿ ಉತ್ತಮ ಫಲಿತಾಂಶವನ್ನು ದಾಖಲಿಸಿರುವದು ಶ್ಲಾಘನೀಯವೆಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕೆಂಚಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ವತಿಯಿಂದ ನಗರದ ಸಂತ ಜೋಸೆಫರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿಭಾಗವಾರು ಶೇ. 100 ಫಲಿತಾಂಶ ಪಡೆದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಪುರಸ್ಕಾರ ಹಾಗೂ ನಿವೃತ್ತ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿಯಿಂದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ನಂತರದ ದಿನಗಳಲ್ಲಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ಕೊಡಗು ಜಿಲ್ಲೆ ಮೂರನೇ ಸ್ಥಾನವನ್ನು ಉಳಿಸಿಕೊಂಡಿರುವದು ಶ್ಲಾಘನೀಯ ಎಂದರು. ಮುಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದರು.
ಇತ್ತೀಚಿನ ದಿನಗಳಲ್ಲಿ ಸ್ಪರ್ಧೆಗಳು ಹೆಚ್ಚಿದ್ದು, ವಿದ್ಯಾರ್ಥಿಗಳು ಅವುಗಳಿಗೆ ಹೊಂದಿಕೊಂಡು ಬೆಳೆಯಬೇಕಾಗಿದೆ. ಜಿಲ್ಲೆಯಲ್ಲಿ ಪದವಿ ಪೂರ್ವ ಶಿಕ್ಷಕರ ಹುದ್ದೆ ಖಾಲಿ ಇದ್ದು, ಸರ್ಕಾರ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಇದೇ ಸಂದರ್ಭ ಕೆಂಚಪ್ಪ ಒತ್ತಾಯಿಸಿದರು.
ಕೊಡಗು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷೆ ಕೆ.ಎಂ. ಭವಾನಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸ್ಪರ್ಧಾತ್ಮಕ ಯುಗಕ್ಕೆ ಹೊಂದಿಕೊಳ್ಳುವ ಸಾಮಥ್ರ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಸಮಾಜಕ್ಕೆ ಉತ್ತಮ ಮಾರ್ಗದರ್ಶಕರಾಗಬೇಕು ಎಂದರು.
ಸಂತ ಜೋಸೆಫರ ಪ.ಪೂ. ಕಾಲೇಜು ಪ್ರಾಂಶುಪಾಲರಾದ ಸಿಸ್ಟರ್ ಶೋಭಾ ಮಾತನಾಡಿ, ಜೀವನದಲ್ಲಿ ಪ್ರಯತ್ನದ ಜೊತೆಗೆ ಒಂದು ಗುರಿಯನ್ನು ಹೊಂದಿದಾಗ ಮಾತ್ರ ಸಾಧನೆಯ ಮೆಟ್ಟಿಲೇರಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಭಾ ಕಾರ್ಯಕ್ರಮದ ನಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಹಾಗೂ ವಿಭಾಗವಾರು ಶೇ. 100 ರಷ್ಟು ಫಲಿತಾಂಶ ಪಡೆದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಲ್ಲದೇ ಶಿಕ್ಷಕ ವೃತ್ತಿಯಿಂದ ನಿವೃತರಾದ ಹೆಚ್.ಕೆ. ದೇವರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಉಪನ್ಯಾಸಕರುಗಳ ಸಂಘದ ಅಧ್ಯಕ್ಷರಾದ ಫಿಲಿಪ್ ವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಸಂಘದ ಕಾರ್ಯಾ ಧ್ಯಕ್ಷರಾದ ಟಿ. ಹೇಮಂತ್ಕುಮಾರ್, ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ನಾಗರಾಜ್, ಖಜಾಂಚಿ ಹೆಚ್.ಆರ್. ಸರ್ವೋತ್ತಮ್ ವೀರಾಜಪೇಟೆ ಪ್ರಧಾನ ಕಾರ್ಯದರ್ಶಿ ವಿವೇಕ್ ಸೇರಿದಂತೆ ಮೂರು ತಾಲೂಕಿನ ಅಧ್ಯಕ್ಷರು, ಸದಸ್ಯರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಶಿಕ್ಷಕರು ಹಾಜರಿದ್ದರು.