ಮಡಿಕೇರಿ, ಜೂ. 13: ಕಳೆದ ವರ್ಷ ಸುರಿದ ಭಾರೀ ಮಳೆಗೆ ಜಿಲ್ಲೆಯಲ್ಲಿ ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ, ಜೀವ ಹಾನಿಯಾಗಿದೆ. ಅದೇ ರೀತಿ ಈ ಭಾರಿಯು ಹೆಚ್ಚು ಮಳೆಯಾದರೆ, ಅದಕ್ಕೆ ಬೇಕಾದ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ, ಯುನಿಸೆಫ್ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣಾ ತರಬೇತಿ ಕಾರ್ಯಾಗಾರ ನಗರದ ಓಂಕಾರ ಸದನದಲ್ಲಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತಿವೃಷ್ಟಿ ಸಂಭವಿಸಿದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದ್ದು, ಅಂತಹ ಸಂದರ್ಭದಲ್ಲಿ ಪರಿಹಾರ ಕೇಂದ್ರಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ಸ್ವಯಂ ಸೇವಕರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.
ಪ್ರಕೃತಿ ವಿಕೋಪ ಸಂಭವಿಸಿದಾಗ ಯಾವ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬದರ ಬಗ್ಗೆ ಜಿಲ್ಲಾಡಳಿತದ ವತಿಯಿಂದ ತರಬೇತಿ ನೀಡಲಾಗುತ್ತಿದ್ದು, ಪ್ರತಿಯೊಬ್ಬರು ಕೆಲಸ ಮಾಡಬೇಕು. ಆಸ್ತಿ ಪಾಸ್ತಿ ಹಾನಿಯಾದರೆ ಮರಳಿ ಪಡೆಯಬಹುದು. ಆದರೆ ಜೀವ ಹಾನಿಯಾದರೆ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ, ಯೂನಿಸೆಫ್ ಸಮಾಲೋಚಕ ಎಂ. ಪ್ರಭಾತ್, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಕಾಳಪ್ಪ, ಜಿಲ್ಲಾ ಸಂಘಟಕಿ ದಮಯಂತಿ, ಸ್ಕೌಟ್ಸ್ ಮತ್ತು ಗೈಡ್ಸ್‍ನ ತಾಲೂಕು ಕಾರ್ಯದರ್ಶಿ ಇತರರು ಇದ್ದರು.