ಮಡಿಕೇರಿ, ಜೂ. 14: ತೀವ್ರ ಅತಿವೃಷ್ಟಿಯಿಂದಾಗಿ ಪ್ರಕೃತಿ ವಿಕೋಪ ಸಂಭವಿಸಿದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಕಳೆದ ಎರಡು ದಿನಗಳಿಂದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭ ನಡೆಯಿತು.

ನಗರದ ಓಂಕಾರ ಸದನದಲ್ಲಿ ನಡೆದ ಕಾರ್ಯಗಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಮಾತನಾಡಿ ಪ್ರಕೃತಿ ವಿಕೋಪ ಉಂಟಾದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‍ನ ವಿದ್ಯಾರ್ಥಿಗಳು ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರಿಗೆ ನೆರವು ನೀಡುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುವಂತಾಗಬೇಕು ಎಂದರು.

ಪ್ರಕೃತಿ ವಿಕೋಪ ಉಂಟಾದ ಸಂದರ್ಭದಲ್ಲಿ ವಿವಿಧ ಕಡೆಗಳಲ್ಲಿ ಸಂತ್ರಸ್ತರಿಗೆ ಅಗತ್ಯ ಸಹಕಾರ ನೀಡುವದರ ಜೊತೆಗೆ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಕ್ರಮವಹಿಸ ಬೇಕು ಎಂದು ಅವರು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್‍ನ ಸಮವಸ್ತ್ರದಲ್ಲಿ ನೋಡಿದಾಗ ಗೌರವ ಬರುತ್ತದೆ ಎಂದರು.

ಕಳೆದ ಎರಡು ದಿನಗಳಿಂದ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಕೊಡಗು, ಮೈಸೂರು, ದಕ್ಷಿಣ ಕನ್ನಡ, ಹಾಸನ, ಚಾಮರಾಜನಗರ, ಮಂಡ್ಯ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಯ ನೂರಕ್ಕೂ ಹೆಚ್ಚು ಸ್ಕೌಟ್ಸ್ ಮತ್ತು ಗೈಡ್ಸ್ ಪದವಿ ವಿದ್ಯಾರ್ಥಿಗಳು, ಶಿಕ್ಷಕರು, ಇತರರು ಭಾಗವಹಿಸಿದ್ದರು. ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಕಿಟ್ಟು ಕಾಳಪ್ಪ, ಜಿಲ್ಲಾ ಆಯುಕ್ತ ಜಿಮ್ಮಿ ಸೀಕ್ವೆರಾ ಹಾಗೂ ಪ್ರಭಾತ್ ಕಲ್ಕೂರ, ವನಿತ್ ಕುಮಾರ್, ದಮಯಂತಿ, ಇತರರು ಇದ್ದರು.