ಕುಶಾಲನಗರ, ಜೂ 17: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಶಾಲನಗರ ವಲಯ ಅರಣ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ, ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಸ್ವಚ್ಛತೆ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ನಡೆದ ಮೆರವಣಿಗೆಗೆ ಪ.ಪಂ. ಆರೋಗ್ಯಾಧಿಕಾರಿ ಸದಾಶಿವಮೂರ್ತಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಸ್ವಚ್ಛತಾ ಕಾರ್ಯಕ್ರಮಕ್ಕೆ ಪ.ಪಂ. ಸದಸ್ಯ ಜಯವರ್ಧನ್ ಚಾಲನೆ ನೀಡಿದರು. ಗಣಪತಿ ದೇವಾಲಯ ದಿಂದ ಆರ್‍ಎಂಸಿ ವರೆಗೆ ನಡೆದ ಮೆರವಣಿಗೆಯಲ್ಲಿ ಕನ್ನಡ ಭಾರತಿ ಪಪೂ ಕಾಲೇಜು ವಿದ್ಯಾರ್ಥಿಗಳು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರು ಮತ್ತು ನದಿ ಸ್ವಚ್ಛತಾ ಆಂದೋಲನ ಪ್ರಮುಖರು ಪಾಲ್ಗೊಂಡು ರಸ್ತೆ ಬದಿಗಳಲ್ಲಿ ತ್ಯಾಜ್ಯಗಳನ್ನು ತೆರವು ಮಾಡಿದರು. ಆರ್‍ಎಂಸಿ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್. ಚಿಣ್ಣಪ್ಪ ಚಾಲನೆ ನೀಡಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಎಂ.ಡಿ. ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯ ಕ್ರಮವನ್ನು ಸಮಿತಿ ನಿರ್ದೇಶಕ ಶಶಿ ಭೀಮಯ್ಯ ಉದ್ಘಾಟಿಸಿದರು.

ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಚಾಲಕ ಎಂ.ಎನ್. ಚಂದ್ರಮೋಹನ್, ಪ.ಪಂ. ಮುಖ್ಯಾಧಿಕಾರಿ ಸುಜಯ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್, ಯುವ ಒಕ್ಕೂಟ ಮಾಜಿ ಅಧ್ಯಕ್ಷ ಎಂ.ಬಿ. ಜೋಯಪ್ಪ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ.ಪಂ. ಸದಸ್ಯ ಎಂ.ಬಿ. ಸುರೇಶ್, ಉಪ ವಲಯ ಅರಣ್ಯಾಧಿಕಾರಿ ಕನ್ನಂಡ ರಂಜನ್, ನದಿ ಸ್ವಚ್ಛತಾ ಆಂದೋಲನ ಸಮಿತಿ ಪ್ರಮುಖ ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದನ್, ಕಾಲೇಜು ಉಪನ್ಯಾಸಕ ನಾಗೇಂದ್ರಸ್ವಾಮಿ, ಅರಣ್ಯ ಇಲಾಖೆ ಸಿಬ್ಬಂದಿ, ಸಂಘ-ಸಂಸ್ಥೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಹರೀಶ್ ಕಾರ್ಯಕ್ರಮ ನಿರೂಪಿಸಿದರು, ಸೇವಾ ಪ್ರತಿನಿಧಿ ಜಯಲಕ್ಷ್ಮಿ ಸ್ವಾಗತಿಸಿ, ವಿಜಯಲಕ್ಷ್ಮಿ ವಂದಿಸಿದರು. ಆರ್‍ಎಂಸಿ ಆವರಣದಲ್ಲಿ 50 ಕ್ಕೂ ಅಧಿಕ ಗಿಡಗಳನ್ನು ನೆಡಲಾಯಿತು.