ಸುಂಟಿಕೊಪ್ಪ, ಜೂ. 16 : ‘ಪರಿಸರ ಸಂರಕ್ಷಣೆಯಿಂದ ಮಾತ್ರ ಇಡೀ ಜೀವ ಸಂಕುಲದ ಸಂರಕ್ಷಣೆ ಸಾಧ್ಯ ಎಂದು ಜಿಲ್ಲಾ ಸಾಮಾಜಿಕ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಜೆ.ಗೋವರ್ಧನ್ ಸಿಂಗ್ ಹೇಳಿದರು. ಕೊಡಗು ಜಿಲ್ಲಾ ಸಾಮಾಜಿಕ ಅರಣ್ಯ ಇಲಾಖೆಯ ಸೋಮವಾರಪೇಟೆ ಅರಣ್ಯ ವಲಯ ಹಾಗೂ ಮಡಿಕೇರಿ ಅರಣ್ಯ ವಿಭಾಗದ ಕುಶಾಲನಗರ ವಲಯ ಅರಣ್ಯಾಧಿಕಾರಿಗಳ ಸಹಯೋಗದಲ್ಲಿ ವಿಜ್ಞಾನ ಪರಿಷತ್ ಹಾಗೂ ರಾಷ್ಟ್ರೀಯ ಹಸಿರು ಪಡೆಯ ಆಶ್ರಯದಲ್ಲಿ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಅರಣ್ಯ ಮತ್ತು ಪರಿಸರ ಸಂರಕ್ಷಣೆಯ ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಇಕೋ ಕ್ಲಬ್‍ನ ಸಂಚಾಲಕ ಟಿ. ಜಿ. ಪ್ರೇಮಕುಮಾರ್, ವಿದ್ಯಾರ್ಥಿಗಳು ಹೆಚ್ಚು ಸಸಿ ನೆಟ್ಟು ಜನರಲ್ಲಿ ಪರಿಸರ ಜಾಗೃತಿ ಮೂಡಿಸಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಬಾಲಕೃಷ್ಣ, ಶಾಲೆಯಲ್ಲಿ ಮಕ್ಕಳಿಗೆ ಪರಿಸರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಪರಿಸರ ಪ್ರಜ್ಞೆ ಬೆಳಸಲಾಗುತ್ತಿದೆ ಎಂದರು. ಅರಣ್ಯ ಸಂರಕ್ಷಣಾಧಿಕಾರಿ ಪಿ. ಎ. ಸೀಮಾ ಮಾತನಾಡಿ, ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.