ಮಡಿಕೇರಿ, ಜೂ. 22: ಅಲ್ಪಸಂಖ್ಯಾತರಿಗೆ ಮೀಸಲಿರುವ ಯೋಜನೆಗಳನ್ನು ಎಲ್ಲಾ ಇಲಾಖೆಯ ಅಧಿಕಾರಿಗಳು ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ತಲಪಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸಂಬಂಧಿಸಿದ ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಪ್ರತಿಯೊಂದು ಯೋಜನೆಯಲ್ಲಿ ಶೇ. 15 ರಷ್ಟು ಅಲ್ಪಸಂಖ್ಯಾತರಿಗೆ ಮೀಸಲಿರುತ್ತದೆ. ಮೀಸಲಿರುವ ಪ್ರಮಾಣವನ್ನು ಸಂಪೂರ್ಣವಾಗಿ ಅಲ್ಪಸಂಖ್ಯಾತರ ಏಳಿಗೆಗೆ ತಲಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿಯೊಂದು ಯೋಜನೆಯಲ್ಲಿ ಮೀಸಲಿಟ್ಟ ಅನುದಾನ ಸೌಲಭ್ಯ ಪಡೆದುಕೊಂಡ ಫಲಾನುಭವಿಗಳ ವಿವರ ಗುರಿ ಮತ್ತು ಸಾಧನೆಯ ಪ್ರಗತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಪಸಂಖ್ಯಾತ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಶಾಲೆಗಳಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಸುಧಾರಣೆಗೊಳಿಸಬೇಕು ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ದಾಖಲು ಮಾಡಿಸುವಂತಾಗಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಕ್ರಮ ಕೈಗೊಳ್ಳಬೇಕು.

2016-17ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಅಲ್ಪಸಂಖ್ಯಾತರಿಗೆ ನೀಡಿರುವ ಸವಲತ್ತುಗಳ ಕುರಿತು ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಮಾಹಿತಿ ಪಡೆದು ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅವೀನ್ ಅವರು ಜಿಲ್ಲೆಯಲ್ಲಿ ಒಟ್ಟು 91 ನೋಂದಾಯಿತ ಮದರಸಾಗಳಿದ್ದು, 15 ಅಂಶಗಳ ಕಾರ್ಯಕ್ರಮಗಳ ಯೋಜನೆಯ ಪ್ರಕಾರ ಮದರಸ ಶಿಕ್ಷಣವನ್ನು ಆಧುನೀಕರಣಗೊಳಿಸಲು ಕಂಪ್ಯೂಟರ್ ಶಿಕ್ಷಣ ಹಾಗೂ ಆಧುನಿಕ ಸವಲತ್ತುಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಜಿ.ಪಂ. ಸದಸ್ಯ ಪಿ.ಎಂ. ಲತೀಫ್ ಜಿಲ್ಲೆಯ ವಿವಿಧ ಇಲಾಖೆಗಳಿಂದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವಾರು ಯೋಜನೆಗಳ ಬಗ್ಗೆ ಗ್ರಾ.ಪಂ.ಗಳ ಮೂಲಕ ಆಯಾ ಪ್ರದೇಶದ ಜನರಿಗೆ ಮಾಹಿತಿ ತಿಳಿಸಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಅಲ್ಪಸಂಖ್ಯಾತರ ಕುಂದುಕೊರತೆಗಳ ಸಭೆಗಳನ್ನು ನಡೆಸಬೇಕು ಎಂದು ಮನವಿ ಮಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆಯಲ್ಲಿ 29,308 ಫಲಾನುಭವಿಗಳಿಗೆ ರೂ. 140.33 ಲಕ್ಷ ನಿಗದಿಪಡಿಸಲಾಗಿದೆ, ನಿರ್ಗತಿಕ ಮಕ್ಕಳ ಕುಟೀರಕ್ಕೆ ಅನುದಾನ, ಉದ್ಯೋಗಿನಿ ಯೋಜನೆಯ 22 ಫಲಾನುಭವಿಗಳಿಗೆ ರೂ. 2.13 ಲಕ್ಷಗಳ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

¸