ಸೋಮವಾರಪೇಟೆ, ಜೂ. 22: ಕಳೆದ ವರ್ಷ ನಕಲಿ ಪರ್ಮಿಟ್ ಮೂಲಕ ಮರಳು ದಂಧೆ ನಡೆಸಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ವಂಚಿಸಿದ ಲೋಕೋಪಯೋಗಿ ಇಲಾಖಾ ಅಭಿಯಂತರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಪಟ್ಟಣದ ಪತ್ರಿಕಾಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ, ಸಹಾಯಕ ಕಾರ್ಯಪಾಲಕ ಅಭಿಯಂತರರ ಸಹಿಯನ್ನು ನಕಲು ಮಾಡಿ ಮರಳು ದಂಧೆ ಪ್ರಕರಣ ಸಂಬಂಧ ಕರವೇ ಪ್ರತಿಭಟನೆ ನಡೆಸಿದ್ದು, ಸಿದ್ದಾಪುರ ಠಾಣೆಯಲ್ಲಿ ಈ ಬಗ್ಗೆ ಮೊಕದ್ದಮೆ ದಾಖಲಾಗಿದೆ ಎಂದರು.

ಲೋಕೋಪಯೋಗಿ ಇಲಾಖೆಯಿಂದ ಕೊಡಗು ಪ್ಯಾಕೇಜ್ ಅಡಿಯಲ್ಲಿ ನಡೆದ ಹಲವಷ್ಟು ಕಾಮಗಾರಿಗಳು ಕಳಪೆಯಾಗಿರುವ ಬಗ್ಗೆ ದೂರು ಸಲ್ಲಿಕೆಯಾಗಿದೆ. ಮಂಗಳೂರಿನಿಂದ ಆಗಮಿಸಿದ್ದ ಅಭಿಯಂತರರ ತಂಡ ಕೆಲ ದಿನಗಳಲ್ಲಿ ವಾಪಸ್ ಆಗಿದ್ದು, ಮತ್ತೆ ತನಿಖೆಯನ್ನು ಮುಂದುವರೆಸಿಲ್ಲ. ತಕ್ಷಣ ಕಳಪೆ ಕಾಮಗಾರಿಯ ಬಗ್ಗೆ ತನಿಖೆ ನಡೆಸಿ ವರದಿ ನೀಡಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಕರವೇ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಲಿಂಗಪ್ಪ, ತಾಲೂಕು ಅಧ್ಯಕ್ಷ ಕೆ.ಎನ್. ದೀಪಕ್, ಕಾರ್ಯದರ್ಶಿ ಹಸನಬ್ಬ, ಸಾಹಿತ್ಯ ಘಟಕದ ಅಧ್ಯಕ್ಷ ಕೆ.ಪಿ. ಸುದರ್ಶನ್ ಅವರುಗಳು ಉಪಸ್ಥಿತರಿದ್ದರು.