ಚೆಟ್ಟಳ್ಳಿ, ಜೂ. 22: ಮಹಿಳೆಯರು ಸಮಾಜದಲ್ಲಿ ಯಾರನ್ನೂ ಅವಂಭಿಸದೇ ಸ್ವಾವಲಂಬಿಯಾಗಿ ಬದುಕಬೇಕು ಎಂದು ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷೆ ಭಾರತಿ ಹೇಳಿದ್ದಾರೆ.

ಮಾದಾಪಟ್ಟಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಣಾ ಅಭಿಯಾನ, ಶ್ರೀ ಲಕ್ಷ್ಮೀ ಸ್ತ್ರೀ ಶಕ್ತಿ ಸಂಘದ ಉದ್ಘಾಟನಾ ಕಾರ್ಯಕ್ರಮ ಹಾಗೂ ಕಿಶೋರಿಯರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಮಾತನಾಡಿ, ಸ್ತ್ರೀ ಶಕ್ತಿ ಸ್ವಸಹಾಯ ಸಂಘವು ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸುತ್ತಾ ಬರುತ್ತಿವೆ ಎಂದರು.

ಗುಡ್ಡೆಹೊಸೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ಯಾಮ್ ಮಾತನಾಡಿ, ಮನೆಯಿಂದಲೇ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದರು. ಮಕ್ಕಳ ಕ್ರೀಡಾ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಈ ಸಂದರ್ಭ ಗ್ರಾ.ಪಂ. ಸದಸ್ಯೆ ಪುಷ್ಪಾ, ಪ್ರವೀಣ್, ಸ್ತ್ರೀ ಶಕ್ತಿ ಧರ್ಮಸ್ಥಳ ಸಂಘದ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಕುಮಾರಿ ಶೋಭಾ, ಮೇಲ್ವಿಚಾರಕಿ ನಿರ್ಮಲಾ, ಶ್ರೀ ಲಕ್ಷ್ಮಿ ಬ್ಲಾಕ್ ಸೊಸೈಟಿ ಕಾರ್ಯದರ್ಶಿ ಹೇಮಾ, ಹಿರಿಯ ಪತ್ರಕರ್ತ ಚಂದ್ರಮೋಹನ್, ಶಾಲಾ ಮುಖ್ಯೋಪಾಧ್ಯಾಯಿನಿ ದೇವಮ್ಮ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.