ಸೋಮವಾರಪೇಟೆ, ಜೂ. 24: ತಾಲೂಕಿನ ಶಾಂತಳ್ಳಿ ಹೋಬಳಿಗೆ ಒಳಪಡುವ ಶಾಂತಳ್ಳಿ, ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ಉದ್ಯಮಿ ಹರಪಳ್ಳಿ ರವೀಂದ್ರ ಅವರು ರೂ. 1 ಲಕ್ಷ ವೆಚ್ಚದಲ್ಲಿ ಉಚಿತವಾಗಿ ಪುಸ್ತಕಗಳನ್ನು ವಿತರಿಸಿದರು.
ಶ್ರೀಕುಮಾರಲಿಂಗೇಶ್ವರ ಪ್ರೌಢಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಂತಳ್ಳಿ, ಹರಗ, ಕೊತ್ನಳ್ಳಿ, ಬೆಟ್ಟದಳ್ಳಿ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.
ಈ ಸಂದರ್ಭ ಮಾತನಾಡಿದ ರವೀಂದ್ರ ಅವರು, ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಪೋಷಕರು ಗಮನಹರಿಸಬೇಕು. ಆಗಾಗ್ಗೆ ಶಾಲೆಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಬೇಕು ಎಂದರು.
ಪೂರ್ವ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂಗಪ್ಪ ಮಾತನಾಡಿ, ಬಡ ವಿದ್ಯಾರ್ಥಿಗಳಿಗೆ ತಮ್ಮ ಆದಾಯದ ಒಂದು ಭಾಗದಲ್ಲಿ ಉಚಿತವಾಗಿ ಪುಸ್ತಕಗಳನ್ನು ವಿತರಿಸುತ್ತಿರುವ ರವೀಂದ್ರ ಅವರ ಕಾರ್ಯ ಶ್ಲಾಘನೀಯ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂತಹ ನೆರವು ಅತ್ಯಗತ್ಯವಾಗಿದೆ. ದಾನಿಗಳು ನೀಡಿದ ಸೌಲಭ್ಯ ಸದುಪಯೋಗವಾಗಬೇಕು ಎಂದರು.
ಪ್ರೌಢಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಂದರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 16 ವರ್ಷಗಳಿಂದ ಈ ಭಾಗದ ಮಕ್ಕಳಿಗೆ ಉಚಿತವಾಗಿ ಪುಸ್ತಕ ವಿತರಿಸುತ್ತಿರುವ ರವೀಂದ್ರ ಅವರ ಸೇವೆ ಮುಂದುವರೆಯಲಿ ಎಂದು ಆಶಿಸಿದರು.
ವೇದಿಕೆಯಲ್ಲಿ ಉದ್ಯಮಿ ಗಿರೀಶ್ ಮಲ್ಲಪ್ಪ, ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ ಗೋಪಾಲ್ ಅವರುಗಳು ಮಾತನಾಡಿ, ರವೀಂದ್ರ ಅವರ ಸಮಾಜಸೇವೆಯನ್ನು ಸ್ಮರಿಸಿದರು.
ಖಜಾಂಚಿ ಎ.ಕೆ. ಮಾಚಯ್ಯ, ಮುಖ್ಯೋಪಾಧ್ಯಾಯಿನಿ ರತ್ನಾವತಿ, ಶಿಕ್ಷಕ ಶಿವಾನಂದಪ್ಪ, ಸರ್ಕಾರಿ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಸೇರಿದಂತೆ ಕುಮಾರಲಿಂಗೇಶ್ವರ ಶಾಲಾಭಿವೃದ್ಧಿ ಸಮಿತಿಯ ನಿರ್ದೇಶಕರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.