ಕುಶಾಲನಗರ, ಜೂ. 25: ಕೊಡಗು ಜಿಲ್ಲೆಯ ಇಬ್ಬರು ವ್ಯಕ್ತಿಗಳು ಸಾಲುಮರದ ತಿಮ್ಮಕ್ಕ ಇಂಟರ್‍ನ್ಯಾಷನಲ್ ಫೌಂಡೇಶನ್ ಗೌರವ ಸನ್ಮಾನಕ್ಕೆ ಪುರಸ್ಕøತರಾಗಿದ್ದಾರೆ. ಪರಿಸರ ಸಂರಕ್ಷಣೆಗಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮತ್ತು ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಡಿ.ಕೆ.ರಂಜಿತ ಅವರುಗಳು ಪ್ರಶಸ್ತಿ ಪುರಸ್ಕøತರು.

ತಾ. 29 ರಂದು ಬೆಂಗಳೂರಿನಲ್ಲಿ ನಡೆಯಲಿರುವ ವೃಕ್ಷಮಾತೆ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ಡಾ.ಸಾಲುಮರದ ತಿಮ್ಮಕ್ಕ ಅವರ ಅಭಿನಂದನಾ ಸಮಾರಂಭ ಮತ್ತು ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ 2018-19ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಶ್ರವಣ ಬೆಳಗೋಳ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಗಳು ಮತ್ತಿತರ ಗಣ್ಯರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಸತೀಶ್ ಜಾರಕಿಹೋಳಿ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಸಾಲುಮರದ ತಿಮ್ಮಕ್ಕ ಇಂಟರ್‍ನ್ಯಾಷನಲ್ ಫೌಂಡೇಶನ್ ಅಧ್ಯಕ್ಷರಾದ ಉಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ 10 ವರ್ಷಕ್ಕೂ ಅಧಿಕ ಕಾಲ ಕಾವೇರಿ ನದಿ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಯಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿ ಕೊಂಡಿರುವ ಎಂ.ಎನ್. ಚಂದ್ರಮೋಹನ್ ಕುಶಾಲನಗರ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ 1500 ಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಕುಶಾಲನಗರ ಸರಕಾರಿ ಬಸ್ ನಿಲ್ದಾಣ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಆಸ್ಪತ್ರೆ, ಕೃಷಿ ಉತ್ಪನ್ನ ಮಾರುಕಟ್ಟೆ ಆವರಣಗಳಲ್ಲಿ ನೂರಾರು ಗಿಡಗಳು ಬೆಳೆದು ನಿಂತಿರುವದನ್ನು ಕಾಣಬಹುದು. ಕಾವೇರಿ ನದಿ ಸಂರಕ್ಷಣೆ ನಿಟ್ಟಿನಲ್ಲಿ ನದಿ ನೀರು ನೇರವಾಗಿ ಕಲುಷಿತವಾಗುವದನ್ನು ತಪ್ಪಿಸುವ ಬಗ್ಗೆ ಜನರಿಗೆ ಅರಿವು, ಜಾಗೃತಿ ಮೂಡಿಸುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದು 2016 ರಲ್ಲಿ ತಲಕಾವೇರಿಯಿಂದ ಪೂಂಪ್‍ಹಾರ್ ತನಕ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಡಿ.ಕೆ.ರಂಜಿತಾ ಸೋಮವಾರಪೇಟೆಯ ಹಾನಗಲ್ ಡಿ.ಎನ್.ಕುಶಾಲಪ್ಪ, ಡಿ.ಕೆ.ಸರೋಜ ದಂಪತಿಗಳ ಪುತ್ರಿಯಾಗಿದ್ದು, ರಾಷ್ಟ್ರೀಯ ಮಟ್ಟದ ಕಬಡ್ಡಿ ಪಟುವಾಗಿದ್ದಾರೆ. ಜಿಲ್ಲಾ, ರಾಜ್ಯಮಟ್ಟದ ಪಂದ್ಯಾಟದಲ್ಲಿ ಪಾಲ್ಗೊಂಡ ರಂಜಿತಾ ರಾಷ್ಟ್ರೀಯ ಮಟ್ಟದಲ್ಲಿ ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ತಂಡವನ್ನು ಪ್ರತಿನಿಧಿಸಿದ್ದಾರೆ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಕ್ರೀಡೆಯಲ್ಲಿ ಜಿಲ್ಲಾಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದರು.