ಮಡಿಕೇರಿ, ಜೂ. 26: ಜಿಲ್ಲೆಯಲ್ಲಿ ಡೆಂಗ್ವೀ ಮತ್ತು ಇನ್ನಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಬಗ್ಗೆ ಪರಿಶೀಲನೆ ನಡೆಸಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳ ಸಮನ್ವಯದೊಂದಿಗೆ ನಿರ್ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ತಿಳಿಸಿದರು.
ನಗರದ ಜಿಲ್ಲಾ ಆಸ್ಪತ್ರೆಯ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ತಾಲೂಕು ಆರೋಗ್ಯ ಅಧಿಕಾರಿಗಳು, ವ್ಯೆದ್ಯಾಧಿಕಾರಿಗಳು ಆರೋಗ್ಯ ಸಹಾಯಕರುಗಳು ಹಾಗೂ ಪ್ರಯೋಗಶಾಲಾ ತಂತ್ರಜ್ಞರ ಜೊತೆ ನಡೆದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ನೀಡಿ ಏಡೀಸ್ ಲಾರ್ವಾ ಸಮೀಕ್ಷೆ ಕೈಗೊಳ್ಳುತ್ತಿದ್ದಾರೆ. ಏಡೀಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ಗುರುತಿಸಿ ಸಾರ್ವಜನಿಕರಲ್ಲಿ ಲಾರ್ವಾ ಉತ್ಪತ್ತಿ ತಾಣಗಳ ನಿರ್ಮೂಲನೆಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ. ಗ್ರಾಮಾಂತರ ಮತ್ತು ನಗರ, ಪಟ್ಟಣ ಪ್ರದೇಶಗಳಲ್ಲಿ ಪ್ರಮುಖ ಸ್ಥಳಗಳ ಪರಿಸರದಲ್ಲಿ ಬಿಸಾಡಿದ ಮಳೆನೀರು ಸಂಗ್ರಹವಾಗು ವಂತಹ ಘನ ತ್ಯಾಜ್ಯ ವಸ್ತುಗಳಾದ ಪ್ಲಾಸ್ಟಿಕ್ ವಸ್ತುಗಳು, ಎಳನೀರಿನ ಚಿಪ್ಪುಗಳು, ಗಾಜಿನ ವಸ್ತುಗಳು, ಹಳೆಯ ಟೈರುಗಳು ಮತ್ತಿತರವನ್ನು ವಾರಕ್ಕೊಮ್ಮೆ ವಿಲೇವಾರಿ ಮಾಡಿ, ಸೊಳ್ಳೆಗಳು ಉತ್ಪತ್ತಿಯಾಗದಂತೆ ಆರೋಗ್ಯ ಶಿಕ್ಷಣ ನೀಡಲು ಮತ್ತು ಎಲ್ಲಾ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸಮನ್ವಯ ದೊಂದಿಗೆ ಅಗತ್ಯ ಕ್ರಮವಹಿಸಲು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ಗಳಿಗೆ ಸೂಚಿಸಲಾಗಿದೆ ಎಂದರು.