ಮಡಿಕೇರಿ, ಜೂ. 28: ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಕರ್ಣಂಗೇರಿಯಲ್ಲಿ ಮನೆ ನಿರ್ಮಾಣ ಮಾಡಲು ಕಾಯ್ದಿರಿಸಿದ ಜಾಗದ ಬದಲಿಗೆ ಬೇರೆ ಪ್ರದೇಶದಲ್ಲಿ ಬದಲಿ ಜಾಗವನ್ನು ಗುರುತಿಸಿ 11 ಪೌರಕಾರ್ಮಿಕರಿಗೆ ಮನೆ ನಿರ್ಮಾಣಕ್ಕೆ ಕ್ರಮಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತ ರಮೇಶ್ ಅವರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಫಾಯಿ ಕರ್ಮಚಾರಿ, ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿ ನಡೆದ ಸಭೆಯ ಅನುಪಾಲನಾ ವರದಿಯ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಅವರು ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಇರುವ ಸವಲತ್ತಿನಡಿ ವಿದ್ಯಾವಂತ ಪೌರ ಕಾರ್ಮಿಕರ ಮಕ್ಕಳಿಗೆ ಉದ್ಯೋಗಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪೌರ ಕಾರ್ಮಿಕರಿಂದ ನಗರದಲ್ಲಿ ಹಸಿಕಸ, ಒಣಕಸ ಶೇಖರಣೆ ಹಾಗೂ ವಿಂಗಡಣೆ ಬಗ್ಗೆ ಮಾಹಿತಿ ಪಡೆದು ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ, ಆರೋಗ್ಯ ಸೌಲಭ್ಯ ನೀಡುತ್ತಿರುವ ಬಗ್ಗೆ ಮಾಹಿತಿ ಪಡೆದರು.
ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿ ಅವರ ಸಮಸ್ಯೆಗಳನ್ನು ತುರ್ತಾಗಿ ಪರಿಶೀಲಿಸಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಪೌರಾಯುಕ್ತರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಪೌರ ಕಾರ್ಮಿಕರ ಹಲವು ಕುಂದುಕೊರತೆ ನಿವಾರಣೆ ಮಾಡಲು ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಫಾಯಿ ಕರ್ಮಚಾರಿ ಸಮಿತಿ ಪ್ರತಿನಿಧಿಗಳಾದ ಲಕ್ಷ್ಮೀ, ಲೋಕೇಶ್, ಕೆಂಪಮ್ಮ ಇವರುಗಳು ಹಲವು ವಿಚಾರ ಪ್ರಸ್ತಾಪಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ, ಐಟಿಡಿಪಿ ಅಧಿಕಾರಿ ಶಿವಕುಮಾರ್, ತಹಶೀಲ್ದಾರರು, ತಾ.ಪಂ. ಇಒಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.