ಮಡಿಕೇರಿ, ಜೂ. 28: ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ನಾಳೆಯ ಬಗ್ಗೆ ಚಿಂತಿಸುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಹೇಳಿದರು.

ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶಕ್ತಿಧಾಮ ಮಾದಕ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ, ಗ್ರೀನ್ ಡಾಟ್ ಟ್ರಸ್ಟ್, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆಯು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಾದಕ ವಸ್ತುಗಳಾದ ಡ್ರಗ್ಸ್, ಹೆರಾಯಿನ್, ಬ್ರೌನ್ ಶುಗರ್ ಮತ್ತಿತರ ದ್ರವ್ಯಗಳ ಚಟಕ್ಕೆ ತುತ್ತಾಗಬಾರದು, ಯುವ ಜನರು ತಮ್ಮ ಜೀವನವನ್ನು ಹಸನು ಮಾಡಿಕೊಳ್ಳುವತ್ತ ಗಮನ ಹರಿಸಬೇಕು ಎಂದು ತಿಳಿಸಿದರು.

ಮಾನವನ ಜೀವನ ಅತ್ಯಂತ ಅಮೂಲ್ಯ, ಆದ್ದರಿಂದ, ಜೀವನದಲ್ಲಿ ಭವಿಷ್ಯದಲ್ಲಿ ಉತ್ತಮ ಗುರಿಯನ್ನು ಸಾಧಿಸಲು ನಿರಂತರ ಪ್ರಯತ್ನಿಸಬೇಕು ಎಂದು ಸುಮನ್ ಆಶಯ ವ್ಯಕ್ತಪಡಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ಮಾತನಾಡಿ, ವಿದ್ಯಾರ್ಥಿಗಳು ಅತೀ ಹೆಚ್ಚು ಮಾದಕ ವಸ್ತುಗಳ ಸೇವನೆ ಹಾಗೂ ಹೆಚ್ಚು ಅಪರಾಧಗಳಲ್ಲಿ ತೊಡಗಿರುವದು ಬೇಸರದ ಸಂಗತಿಯಾಗಿದೆ. ಯುವಜನತೆ ಹಾಗೂ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರ ಬೇಕು. ಇದರಿಂದ, ಜೀವನ ಉತ್ತಮವಾಗಿರುತ್ತದೆ. ಪೋಷಕರ ಆಸೆ ಆಕಾಂಕ್ಷೆಗಳನ್ನು ಈಡೇರಿಸಲು ವಿದ್ಯಾರ್ಥಿಗಳು ಸತತ ಪ್ರಯತ್ನಿಸಬೇಕು ಎಂದರು. ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿ ಗಳು ಮಾದಕ ವಸ್ತುಗಳಿಗೆ ಗುರಿಯಾದರೆ ಜೀವನದ ಗುರಿಯನ್ನು ನಾಶ ಪಡಿಸಿಕೊಂಡಂತೆ. ಆದ್ದರಿಂದ, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವಿರಬೇಕು ಎಂದರು.

ಮನೋವೈದ್ಯರಾದ ಡಾ. ಡೇವಿನ್ ಲಿನೇಕರ್ ಕರ್ಕಡ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಮಾತನಾಡಿ, ಮಾದಕ ವಸ್ತುಗಳ ಚಟಕ್ಕೆ ದಾಸರಾಗಬೇಡಿ ಎಂದರು.

ಮಾದಕ ವಸ್ತುಗಳ ಸೇವನೆ ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಸಾಮಥ್ರ್ಯವನ್ನು ಕುಂಠಿತಗೊಳಿಸುತ್ತದೆ. ಮಾದಕ ವಸ್ತುಗಳ ಬಳಕೆಗೆ ಇಳಿದವರು ದೈನಂದಿನ ಚಟುವಟಿಕೆಗಳಲ್ಲಿ ನಿರಾಸಕ್ತಿ, ಅನವಶ್ಯಕ ವಿವಾದಗಳನ್ನು ಸೃಷ್ಟಿಸುವದು ಮೊದಲಾದ ಸಮಾಜ ವಿರೋಧಿ ಕಾರ್ಯಗಳಲ್ಲಿ ತೊಡಗುವದು ಕಂಡು ಬರುತ್ತದೆ. ಆದ್ದರಿಂದ ಇದರಿಂದ ದೂರವಿರಬೇಕು ಎಂದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಉಪ ನಿರೀಕ್ಷಕ ಕೆ.ಎಸ್. ಸುಂದರ್ ರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕೆ. ಮೋಹನ್, ಜಿ.ಪಂ. ಸಹಾಯಕ ಕಾರ್ಯದರ್ಶಿ ಬಾಬು, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಎನ್. ಆನಂದ್, ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ಆರ್. ಸಂಪತ್‍ಕುಮಾರ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಡಿ. ತಿಮ್ಮಯ್ಯ, ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಇದ್ದರು.

ವಿದ್ಯಾರ್ಥಿನಿ ಲಿಖಿತಾ ಪ್ರಾರ್ಥಿಸಿದರು. ರಾಜಶೇಖರ್ ಸ್ವಾಗತಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿ, ವಂದಿಸಿದರು.