ಸೋಮವಾರಪೇಟೆ, ಜು. 1: ಜಿಲ್ಲೆಯಲ್ಲಿರುವ ಸಿ ಮತ್ತು ಡಿ ಜಾಗದ ಸಮಸ್ಯೆಗಳಿಗೆ ಎಲ್ಲಾ ರೀತಿಯಲ್ಲೂ ಮುಕ್ತಿ ದೊರಕಿದ್ದು, ಶೀಘ್ರದಲ್ಲೇ ಎಲ್ಲರಿಗೂ ಹಕ್ಕುಪತ್ರ ನೀಡಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಇಲ್ಲಿನ ಜಾನಕಿ ಕನ್ವೆನ್‍ಷನ್ ಸಭಾಂಗಣದಲ್ಲಿ ತಾಲೂಕು ಕಂದಾಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 94 ಸಿ ಮತ್ತು 94 ಸಿ.ಸಿ. ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ, ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.
ಈ ಹಿಂದೆ ಪೈಸಾರಿ ಜಾಗದ ಒತ್ತುವರಿದಾರರಿಗೆ ಜಾಗಕ್ಕೆ ಸಂಬಂಧಪಟ್ಟಂತೆ ಹಕ್ಕುಪತ್ರ ವಿತರಿಸಲಾಗುತ್ತಿತ್ತು. ಇದೀಗ ರಾಜ್ಯ ಅರ್ಜಿ ಸಮಿತಿಯಲ್ಲಿ ಅರ್ಜಿ ಸಲ್ಲಿಸಿದ ಮೇರೆ ಸಿ. ಮತ್ತು ಡಿ. ಜಾಗದಲ್ಲಿರುವ ಮಂದಿಗೂ ಸಹ ಹಕ್ಕುಪತ್ರ ವಿತರಿಸಲು ಕ್ರಮವಹಿಸಲಾಗಿದೆ ಎಂದು ರಂಜನ್ ಹೇಳಿದರು.
ಈ ಹಿಂದೆ ಲ್ಯಾಂಡ್‍ಬ್ಯಾಂಕ್‍ಗೆ ನೀಡಲಾಗಿದ್ದ ಸುಮಾರು 1,75,411.85 ಎಕರೆ ಜಾಗವನ್ನು ಸರ್ಕಾರ ಮತ್ತೆ ವಾಪಸ್ ಪಡೆದಿದ್ದು, ಅರ್ಜಿ ಸಮಿತಿಯಲ್ಲಿ 7 ಬಾರಿ ವಿಚಾರಣೆಗೆ ತೆಗೆದುಕೊಂಡು ಎಲ್ಲಾ ರೀತಿಯ ಗೊಂದಲಗಳನ್ನು ನಿವಾರಿಸಲಾಗಿದೆ. ಹಿಂದಿನ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಆಸಕ್ತಿಯಿಂದ ಸಮಸ್ಯೆ ಬೇಗ ಬಗೆಹರಿದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಹಕ್ಕುಪತ್ರಕ್ಕಾಗಿ 6,699 ಅರ್ಜಿಗಳು ವಿಲೇವಾರಿಗೆ ಬಾಕಿ ಉಳಿದಿವೆ. ಫಾರಂ 50, 53, 57ರ ಅಡಿಯಲ್ಲಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ಅಧಿಕಾರಿಗಳು ಮುಂದಾಗಬೇಕು. ಸ್ಥಳಗಳನ್ನು ಖುದ್ದು ಪರಿಶೀಲನೆ ನಡೆಸಬೇಕು. ಯಾವದೇ ಗೊಂದಲಗಳಿಗೆ ಆಸ್ಪದ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಾಕೃತಿಕ ವಿಕೋಪ ಸಂದರ್ಭ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಬದಲಿ ಭೂಮಿ ನೀಡುವ ಸಂಬಂಧ ತಕ್ಷಣ ಕ್ರಮಕೈಗೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದು, ಈ ಬಗ್ಗೆ ರಾಜ್ಯ ಅರ್ಜಿ ಸಮಿತಿಗೆ ಅರ್ಜಿ ಸಲ್ಲಿಸಲಾಗಿದೆ ಎಂದ ರಂಜನ್, ಈವರೆಗೆ 32 ಸಾವಿರ ಮಂದಿ ಸಂತ್ರಸ್ತರಿಗೆ ಪರಿಹಾರ ನೀಡಲಾಗಿದೆ ಎಂದರು.
ತಾಲೂಕು ತಹಶೀಲ್ದಾರ್ ಗೋವಿಂದರಾಜು ಮಾತನಾಡಿ, ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸದಸ್ಯ ಬಿ.ಜೆ. ದೀಪಕ್, ತಾ. ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್, ಉಪಾಧ್ಯಕ್ಷ ಅಭಿಮನ್ಯುಕುಮಾರ್, ಸದಸ್ಯೆ ತಂಗಮ್ಮ, ಆರ್. ಪುಷ್ಪಾ ಹಾಗೂ ಫಲಾನುಭವಿಗಳು, ಕಂದಾಯ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.