ಕೂಡಿಗೆ, ಜು. 1: ರಾಜ್ಯ ಹೆದ್ದಾರಿಗಳಲ್ಲಿ ಬೃಹತ್ತಾದ ಕನ್ನಡೇತರ ನಾಮಫಲಕಗಳೇ ಹೆಚ್ಚಾಗಿ ರಾರಾಜಿಸುತ್ತಿರುವ ಬಗ್ಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಖಂಡಿಸಿ, ಇವುಗಳನ್ನು ತೆರವುಗೊಳಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್‍ಸಾಗರ್ ಕೆಡಿಪಿ ಸಭೆಯಲ್ಲಿ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯನಿರ್ವಹಣಾಧಿಕಾರಿಗಳು ಆಯಾ ತಾಲೂಕು ಕಾರ್ಯನಿರ್ವಹಕಾಧಿಕಾರಿಗಳಿಗೆ ಆದೇಶಿಸಿದ ಮೇರೆಗೆ ಆಯಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಸೋಮವಾರ ಕುಶಾಲನಗರ-ಮಡಿಕೇರಿ ರಾಜ್ಯ ಹೆದ್ದಾರಿಯ ಹೊಸಕೋಟೆ ಮತ್ತು ಸುಂಟಿಕೊಪ್ಪ ವ್ಯಾಪ್ತಿಗಳಲ್ಲಿ ರಾರಾಜಿಸುತ್ತಿದ್ದ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ನಿಯಮ ಉಲ್ಲಂಘಿಸಿ ಅಳವಡಿಸಿದ್ದ ಕನ್ನಡೇತರ ನಾಮಫಲಕಗಳನ್ನು ತೆರವುಗೊಳಿಸಿದರು.ಈ ಬಗ್ಗೆ ತಾಲೂಕು ಕಾರ್ಯನಿರ್ವಹಣಾಧಿಕಾರಿ ಸುನೀಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಿ ಆದೇಶದಂತೆ ನಾಮಫಲಕಗಳು ಶೇ.60 ರಷ್ಟು ಕನ್ನಡ ಭಾಷೆಯಲ್ಲಿರಬೇಕು. ಶೇ.40 ಭಾಗ ಫಲಕಗಳ ಕೆಳಭಾಗದಲ್ಲಿ ಕನ್ನಡೇತರ ಭಾಷೆಗಳಲ್ಲಿ ಅಳವಡಿಸಬಹುದಾಗಿದೆ. ಆದರೂ ಅಂಗಡಿ ಮಾಲೀಕರು ತಮ್ಮ ಅಂಗಡಿಗಳ ಮುಂಭಾಗದ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡದೆ (ಮೊದಲ ಪುಟದಿಂದ) ಕನ್ನಡೇತರ ನಾಮಫಲಕಗಳನ್ನು ಅಳವಡಿಸಿದ್ದಾರೆ. ಇವುಗಳನ್ನು ತೆರವುಗೊಳಿಸಲು ಆಯಾಯಾ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಈಗಾಗಲೇ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಈ ನಿಯಮವನ್ನು ಉಲ್ಲಂಘಿಸಿದವರಿಗೆ ಅಂಗಡಿಯ ಪರವಾನಿಗೆಯನ್ನು ರದ್ದುಪಡಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.