ಮಡಿಕೇರಿ, ಜು. 2: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ನಗರದ ಮೂರು ನಗರಸಭಾ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮ ತಾ. 3 ರಂದು (ಇಂದು) ನಡೆಯಲಿದೆ.

ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾಭವನದಲ್ಲಿ ಮಧ್ಯಾಹ್ನ 2.30 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪನ್ನೇಕರ್ ಉದ್ಘಾಟಿಸಲಿದ್ದಾರೆ. ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್ ಅವರು ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳಲಿದ್ದು, ಪ್ರಥಮ ದರ್ಜೆ ಗುತ್ತಿಗೆದಾರ ಬಿ.ಬಿ. ಐತ್ತಪ್ಪ ರೈ ಪುಸ್ತಕಗಳನ್ನು ವಿತರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪ್ರಜಾಸತ್ಯ ದಿನಪತ್ರಿಕೆಯ ಸಂಪಾದಕ ಬಿ.ಸಿ. ನವೀನ್ ಕುಮಾರ್, ಕೃಷಿ ಅಧಿಕಾರಿ ಎಂ.ವಿ. ವರದರಾಜು, ಪ್ರಥಮ ದರ್ಜೆ ಗುತ್ತಿಗೆದಾರ ಬಿ.ಆರ್. ರವೀಂದ್ರ ರೈ, ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ಸಂಘಟನಾ ಸಂಚಾಲಕರುಗಳಾದ ದೀಪಕ್ ಹಾಗೂ ಕುಮಾರ್ ಪಾಲ್ಗೊಳ್ಳಲಿದ್ದಾರೆ.