ಮಡಿಕೇರಿ, ಜು. 5: ಇಚ್ಛಾಶಕ್ತಿ ಮತ್ತು ಶ್ರದ್ಧೆ ಇದ್ದಲ್ಲಿ ಐಬಿಪಿಎಸ್ (ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ) ನಡೆಸುವ ಪರೀಕ್ಷೆಯನ್ನು ಎದುರಿಸಬಹುದು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ತಿಳಿಸಿದ್ದಾರೆ.
ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ, ಸ್ಟಡಿ ಸರ್ಕಲ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಗರದ ಜೂನಿಯನ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಶುಕ್ರವಾರ ನಡೆದ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳ ನೇಮಕಾತಿಗೆ ನಡೆಯುವ ಪರೀಕ್ಷೆಗೆ ಕನ್ನಡ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಈ ವರ್ಷದಿಂದ ಜಾರಿಗೆ ಬರಲಿದೆ. ಈ ಅವಕಾಶವನ್ನು ಬಳಸಿಕೊಳ್ಳುವಂತೆ ಶಾಸಕರು ಹೇಳಿದರು.
ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶಗಳು ವಿಫುಲವಾಗಿದ್ದು, ಬೇಡಿಕೆಗೆ ತಕ್ಕಂತೆ ಅಧ್ಯಯನ ಮಾಡಬೇಕು. ಆ ನಿಟ್ಟಿನಲ್ಲಿ ವೃತ್ತಿ ಕೌಶಲ್ಯ ಬೆಳೆಸಿಕೊಳ್ಳುವಂತಾಗಬೇಕು ಎಂದು ಅಪ್ಪಚ್ಚುರಂಜನ್ ಅವರು ಸಲಹೆ ಮಾಡಿದರು. ಸಿಕ್ಕಿರುವ ಹುದ್ದೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ಅದಕ್ಕಿಂತ ಉತ್ತಮ ಹುದ್ದೆಗಳನ್ನು ಪಡೆಯಲು ಪ್ರಯತ್ನಿಸಬೇಕು ಎಂದು ಶಾಸಕರು ಹೇಳಿದರು.
ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್ ಅವರು ಮಾತನಾಡಿ ಸ್ಟಡಿ ಸರ್ಕಲ್ ವತಿಯಿಂದ ಕಳೆದ 2009 ರಿಂದ ವರ್ಷದಲ್ಲಿ 4-5 ಪರೀಕ್ಷೆಗಳಿಗೆ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ. ನಾಗರಿಕ ಸ್ಪರ್ಧಾತ್ಮಕ ಪರೀಕ್ಷೆಗೆ ಪದವಿ ಪಡೆದ ಪ್ರತಿಯೊಬ್ಬರೂ ಅರ್ಜಿ ಸಲ್ಲಿಸಲು ಮುಂದಾಗಬೇಕು ಎಂದರು.
ಇದೇ ವರ್ಷದಿಂದ ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶವಿದೆ. ಇದರ ಅವಕಾಶ ಬಳಸಿಕೊಳ್ಳಬೇಕು ಎಂದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಆರ್.ಕೆ.ಬಾಲಚಂದ್ರ ಅವರು ಬ್ಯಾಂಕಿಂಗ್ ಪರೀಕ್ಷೆ ಎದುರಿಸುವ ಬಗ್ಗೆ ಹಲವು ಮಾಹಿತಿ ನೀಡಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ, ಉಪನ್ಯಾಸಕರಾದ ಚಿದಾನಂದ, ನಂದೀಶ್, ಬಿಸಿಎಂ ಇಲಾಖೆಯ ವ್ಯವಸ್ಥಾಪಕರಾದ ಪುಟ್ಟರಾಜು ಇತರರು ಇದ್ದರು.