ಬೆಂಗಳೂರು, ಜು. 12: ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ಕುತ್ತು ತಂದಿದ್ದ ಅತೃಪ್ತ ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ ನೀಡಿ, ಮಂಗಳವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.ರಾಜೀನಾಮೆ ಅಂಗೀಕಾರಕ್ಕೆ ಸ್ಪೀಕರ್ ರಮೇಶ್‍ಕುಮಾರ್ ಅವರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‍ನಲ್ಲಿ ಆರಂಭವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‍ನ 10 ಮಂದಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ನಿನ್ನೆ ನಡೆದ ವಿಚಾರಣೆಯಲ್ಲಿ ಸ್ಪೀಕರ್ ನಿನ್ನೆಯೇ ರಾಜೀನಾಮೆ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಬೇಕು ಮತ್ತು ಆ ಬಗ್ಗೆ ನ್ಯಾಯಾಲಯಕ್ಕೆ ವರದಿ ನೀಡಬೇಕು ಎಂದು ಕೋರ್ಟ್ ಸೂಚನೆ ನೀಡಿತ್ತು. ಆದರೆ, ಸ್ಪೀಕರ್ ಅವರು ಅತೃಪ್ತರ ರಾಜೀನಾಮೆ ಸ್ವೀಕರಿಸಿ, ಅಂತಿಮ ತೀರ್ಮಾನಕ್ಕೆ ಕಾಲಾವಕಾಶದ ಅವಶ್ಯಕತೆ ಇದೆ ಎಂದು ಹೇಳಿದ್ದರು.

ಅದರಂತೆ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೊಯ್ ನೇತೃತ್ವದ ತ್ರಿಸದಸ್ಯ ಪೀಠ, ಪ್ರಸ್ತುತ ಈ ಸಂದರ್ಭದಲ್ಲಿ ಅರ್ಜಿ ಕುರಿತಂತೆ ಯಾವದೇ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಸ್ಪೀಕರ್ ರಮೇಶ್‍ಕುಮಾರ್ ಅವರಿಗೆ ಇಂತಹುದೇ ನಿರ್ಣಯ ಕೈಗೊಳ್ಳಿ ಎಂದು ಸೂಚಿಸಲು ಸಾಧ್ಯವಿಲ್ಲ. ಆ ಅಧಿಕಾರ ತಮ್ಮದಲ್ಲ. ಪ್ರಸ್ತುತ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್‍ಕುಮಾರ್ ಇನ್ನೂ ನಿರ್ಣಯ ಕೈಗೊಂಡಿಲ್ಲ. ಅವರು ನಿರ್ಣಯ ಕೈಗೊಂಡ ಬಳಿಕ ಅದು ಸರಿಯೋ ಅಥವಾ ತಪ್ಪೋ ಎಂದು ಪರಿಶೀಲಿಸಬಹುದು. ಹೀಗಾಗಿ ಈ ನಿಟ್ಟಿನಲ್ಲಿ ಯಥಾಸ್ಥಿತಿ ಮುಂದುವರೆಸಬೇಕು ಎಂದು ಕೋರ್ಟ್ ಅರ್ಜಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.

ಇನ್ನು ಅತೃಪ್ತ ಶಾಸಕರ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದ್ದು, ಸ್ಪೀಕರ್ ಪರವಾಗಿ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ಅಂತೆಯೇ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರ ಪರವಾಗಿ, ವಕೀಲ ರಾಜೀವ್ ಧವನ್ ಅವರು ವಾದ ಮಂಡಿಸಿದರು.

ವಿಶ್ವಾಸ ಮತಕ್ಕೆ ಮುಖ್ಯಮಂತ್ರಿ ನಿರ್ಧಾರ

ಬಂಡಾಯ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸುವಂತಿಲ್ಲ, ಅನರ್ಹಗೊಳಿಸುವಂತಿಲ್ಲ, ಮಂಗಳವಾರದವರೆಗೂ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸುವದಾಗಿ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿಂದು ಸಂತಾಪ ಸೂಚನೆ ವೇಳೆಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ, ಸದ್ಯದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ವಿಶ್ವಾಸ ಮತ ಯಾಚಿಸಲು ನಿರ್ಧರಿಸಿರುವದಾಗಿ ಕುಮಾರಸ್ವಾಮಿ ತಿಳಿಸಿದರು.

(ಮೊದಲ ಪುಟದಿಂದ) ಸದನದ ಬೆಂಬಲವಿದ್ದಾಗ ಮಾತ್ರ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲು ಸಾಧ್ಯ. ಈ ಹಿನ್ನೆಲೆಯಲ್ಲಿ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದು, ವಿಶ್ವಾಸಮತಕ್ಕೆ ಸಮಯ ನಿಗದಿಪಡಿಸುವಂತೆ ಸ್ಪೀಕರ್ ರಮೇಶ್‍ಕುಮಾರ್ ಬಳಿ ಕುಮಾರಸ್ವಾಮಿ ಮನವಿ ಮಾಡಿಕೊಂಡರು.

ಹಾಜರಾಗದ ಮೂವರು ಶಾಸಕರು

ರಾಜೀನಾಮೆ ನೀಡಿರುವ ಮೂವರು ಶಾಸಕರು ಇಂದು ವಿಚಾರಣೆಗೆ ಹಾಜರಾಗುವಂತೆ ಸ್ಪೀಕರ್ ರಮೇಶ್‍ಕುಮಾರ್ ಅವರು ಸಮಯ ನೀಡಿದ್ದರು. ಆದರೆ, ವಿಚಾರಣೆಗೆ ಮೂವರೂ ಗೈರಾಗಿದ್ದಾರೆ. ರಾಜೀನಾಮೆ ಪತ್ರ ಸಲ್ಲಿಸಿರುವವರ ಪೈಕಿ ಕ್ರಮಬದ್ಧವಾಗಿ ಸಲ್ಲಿಕೆ ಮಾಡಿರುವ ಮೂವರು ಶಾಸಕರಾದ ಆನಂದ್‍ಸಿಂಗ್, ನಾರಾಯಣಗೌಡ ಮತ್ತು ಪ್ರತಾಪ್‍ಗೌಡ ಪಾಟೀಲ್ ಅವರಿಗೆ ಶುಕ್ರವಾರ ಸಂಜೆ 3-4 ಗಂಟೆ ಅವಧಿಯಲ್ಲಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸ್ಪೀಕರ್ ರಮೇಶ್ ಕುಮಾರ್ ಈ ಹಿಂದೆ ಸೂಚಿಸಿದ್ದರು.

ಶಾಸಕರು ರಾಜೀನಾಮೆ ನೀಡಿರಲು ಕಾರಣವೇನು? ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆಯೇ? ಮುಂತಾದ ಪ್ರಶ್ನೆಗಳನ್ನು ಅವರು ಶಾಸಕರಿಗೆ ಕೇಳಿ ಅವರಿಂದ ವಿವರಣೆ ಪಡೆದುಕೊಳ್ಳಬೇಕಿತ್ತು. ಆದರೆ, ಈ ಮೂವರೂ ಶಾಸಕರು ಇಂದು ವಿಚಾರಣೆಗೆ ಹಾಜರಾಗಲಿಲ್ಲ.

ಶಾಸಕರ ರಾಜೀನಾಮೆ ಮತ್ತು ಅನರ್ಹತೆ ಕುರಿತಾದ ದೂರಿನ ವಿಚಾರವಾಗಿ ಮಂಗಳವಾರದವರೆಗೂ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಮಧ್ಯಾಹ್ನ ಆದೇಶಿಸಿತ್ತು. ಈ ಆದೇಶದ ಹಿನ್ನೆಲೆಯಲ್ಲಿ ರಾಜೀನಾಮೆ ಕುರಿತು ಯಾವದೇ ಕ್ರಮ ತೆಗೆದುಕೊಳ್ಳಲು ಅವಕಾಶ ಇಲ್ಲದೆ ಇರುವದರಿಂದ ಶಾಸಕರು ವಿಚಾರಣೆಗೆ ಗೈರಾಗಿದ್ದಾರೆ ಎನ್ನಲಾಗಿದೆ.