ಮಡಿಕೇರಿ, ಜು. 17: ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ನಗರದ ಆಜಾದ್ ನಗರದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕ್ಷಯರೋಗ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಕೊಳಚೆ ಪ್ರದೇಶಗಳು, ಸಣ್ಣ ಸಣ್ಣ ಮನೆಗಳು ಹಾಗೂ ಜನದಟ್ಟಣೆ ಪ್ರದೇಶದಲ್ಲಿನ ಮನೆ ಮನೆಗೆ ತೆರಳಿ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯಕ್ರಮ ನಡೆಯಲಿದೆ ಎಂದರು.

ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಜ್ವರ, ತೂಕ ಕಡಿಮೆಯಾಗುವದು, ರಾತ್ರಿ ವೇಳೆ ಬೆವರುವದು ಕ್ಷಯ ರೋಗದ ಲಕ್ಷಣವಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಅಂತಹವರನ್ನು ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ಸೇವೆ ಕಲ್ಪಿಸುವದು ಈ ಆಂದೋಲನದ ಉದ್ದೇಶವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಎ.ಸಿ. ಶಿವಕುಮಾರ್ ಮಾತನಾಡಿ, ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ತಾ. 27 ರವರೆಗೆ ನಡೆಯಲಿದೆ. ಸಕ್ರಿಯ ಕ್ಷಯರೋಗ ಪತ್ತೆ ಹಚ್ಚುವ ಕಾರ್ಯಕ್ರಮ, ಆರೋಗ್ಯ ಕಾರ್ಯಕರ್ತೆಯರು ಕಠಿಣ ಪ್ರದೇಶಗಳ ಮನೆ ಮನೆಗೆ ತೆರಳಿ ಕ್ಷಯರೋಗ ಲಕ್ಷಣ ಕಂಡುಬಂದಲ್ಲಿ ಕಫ ಸಂಗ್ರಹಿಸಿ ತ್ವರಿತವಾಗಿ ಪರೀಕ್ಷೆ ಮಾಡಿಸಿ ಚಿಕಿತ್ಸೆ ನೀಡುವದು ಆಂದೋಲನದ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದರು.

ಕ್ಷಯ ರೋಗದ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಕಫ ಮತ್ತು ಕ್ಷ ಕಿರಣ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಕ್ಷಯರೋಗ ಮೈಕೋ ಬ್ಯಾಕ್ಟೀರಿಯಾದಿಂದ ಹರಡುವ ಒಂದು ಸಾಂಕ್ರಾಮಿಕ ರೋಗ, ಇದು ಸೋಂಕುಳ್ಳ ವ್ಯಕ್ತಿ ಸೀನಿದಾಗ ಮತ್ತು ಕೆಮ್ಮಿದಾಗ ಗಾಳಿಯ ಮೂಲಕ ಹರಡುತ್ತದೆ. ಚಿಕಿತ್ಸೆ ಪಡೆಯದ ಒಬ್ಬ ವ್ಯಕ್ತಿ ಒಂದು ವರ್ಷದಲ್ಲಿ 10 ಅಥವಾ ಹೆಚ್ಚು ಜನರಿಗೆ ಸೋಂಕು ಹರಡಬಲ್ಲನು. ನಿರಂತರ ಚಿಕಿತ್ಸೆಯಿಂದ ಕ್ಷಯರೋಗವನ್ನು ಗುಣಪಡಿಸಬಹುದು ಎಂದು ತಿಳಿಸಿದರು.

ನಗರಸಭಾ ಮಾಜಿ ಸದಸ್ಯ ಮನ್ಸೂರ್, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ. ಆನಂದ್, ಡಾ. ಎಂ. ಶಿವಕುಮಾರ್, ಡಾ. ಗೋಪಿನಾಥ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಇತರರು ಇದ್ದರು.