ಸೋಮವಾರಪೇಟೆ, ಜು. 18: ಇಲ್ಲಿನ ನಗರ ಗೌಡ ಜನಾಂಗ ಒಕ್ಕೂಟದ ವಾರ್ಷಿಕ ಮಹಾಸಭೆ ತಾ. 21 ರಂದು ಸ್ಥಳೀಯ ಒಕ್ಕಲಿಗರ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಎಂ.ಎಂ. ಪ್ರಕಾಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕೂಟದ ವತಿಯಿಂದ ಈವರೆಗೆ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರಲಾಗಿದೆ. ಸೋಮವಾರಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ನೆಲೆಸಿರುವ ಜನಾಂಗ ಬಾಂಧವರನ್ನು ಸಂಘಟಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.

ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಗುವದು. ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಸಂಘದ ಕಚೇರಿ ಅಥವಾ ಮಹಾಸಭೆಯ ದಿನದಂದು ಪೂರ್ವಾಹ್ನ 10 ಗಂಟೆಯ ಒಳಗೆ ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು.

ವಾರ್ಷಿಕ ಮಹಾಸಭೆಗೂ ಮೊದಲು ಬೆಳಿಗ್ಗೆ 9.30ಕ್ಕೆ ಸಂಘದ ಸದಸ್ಯರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆ. ವಾರ್ಷಿಕ ಮಹಾಸಭೆಯಲ್ಲಿ ನೂತನ ಆಡಳಿತ ಮಂಡಳಿ ರಚನೆಯ ಬಗ್ಗೆ ಚರ್ಚೆ ನಡೆಯಲಿದೆ ಎಂದರು. ಸಂಘದ ಸದಸ್ಯ ಹಾಗೂ ಉದ್ಯಮಿ ಹರಪಳ್ಳಿ ರವೀಂದ್ರ ಅವರನ್ನು ಸನ್ಮಾನಿಸಲಾಗುವದು ಎಂದು ಮಾಹಿತಿಯಿತ್ತರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಹೆಚ್.ಬಿ. ಯೋಗೇಂದ್ರ, ಕಾರ್ಯದರ್ಶಿ ಡಿ.ಕೆ. ಕಿರಣ್‍ಕುಮಾರ್, ಉಪ ಕಾರ್ಯದರ್ಶಿ ಎಂ.ಬಿ. ಉಮೇಶ್, ನಿರ್ದೇಶಕ ಜಿ.ಆರ್. ಹಾಲಪ್ಪ ಅವರುಗಳು ಉಪಸ್ಥಿತರಿದ್ದರು.