ವೀರಾಜಪೇಟೆ, ಜು. 21: ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾ. 29 ರಂದು ಹಮ್ಮಿಕೊಂಡಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ತಾಲೂಕು ಅಧ್ಯಕ್ಷ ಮುಲ್ಲೆಂಗಡ ಮಧೋಶ್ ಪೂವಯ್ಯ ಅಧ್ಯಕ್ಷತೆಯಲ್ಲಿ ಕದನೂರು ಗ್ರಾಮ ಪಂಚಾಯಿತಿಯಲ್ಲಿ ನಡೆಯಿತು.
ಕದನೂರು ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ ಮಾತನಾಡಿ, ಇಂತಹ ಸಮ್ಮೇಳನಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ನಡೆಸುವದರಿಂದ ಮುಂದಿನ ಪೀಳಿಗೆಗೆ ಪರಿಚಯಿಸುವಂತಾಗುತ್ತದೆ ಎಂದರು.
ತಾಲೂಕು ಅಧ್ಯಕ್ಷ ಮಧೋಶ್ ಪೂವಯ್ಯ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಸರ್ಕಾರದ ಅಂಗ ಸಂಸ್ಥೆಯಾಗಿದ್ದು, ಸರ್ಕಾರದ ಇತಿಮಿತಿ ಹಾಗೂ ನಿಯಮ ನಿಬಂಧನೆಗಳ ಮೂಲಕ ನಡೆಯುತ್ತಿದೆ ಎಂದರು.
ಸಭೆಯಲ್ಲಿ ಕದನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎನ್. ಶೋಭಾ, ಉಪಾಧ್ಯಕ್ಷೆ ತಟ್ಟಂಡ ರಾಣಿ, ತಾಲೂಕು ಪಂಚಾಯಿತಿ ಸದಸ್ಯೆ ಆಲತಂಡ ಸೀತಮ್ಮ, ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಆರ್. ಸುಬ್ರಮಣಿ, ಜಿಲ್ಲಾ ನಿರ್ದೇಶಕ ಪಳೆಯಂಡ ಪಾರ್ಥ ಚಿಣ್ಣಪ್ಪ, ಅಮ್ಮತ್ತಿ ಹೋಬಳಿ ಅಧ್ಯಕ್ಷ ಜಾನ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ರತ್ನಾ ಮೈತಾಳ ಮತ್ತಿತರರು ಉಪಸ್ಥಿತರಿದ್ದರು.