ಕೂಡಿಗೆ, ಜು. 22: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ಸೂಕ್ತ ಚಿಕಿತ್ಸೆ ಮತ್ತು ಮಾಹಿತಿಯನ್ನು ಒದಗಿಸಲು ಮುಂದಾಗಿದೆ.

ಇತ್ತೀಚೆಗೆ ಜ್ವರ ಪ್ರಕರಣಗಳು ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ತಾಲೂಕು ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ ಈಗಾಗಲೇ ಆರೋಗ್ಯ ಇಲಾಖೆಯ ಕಾರ್ಯಕರ್ತರು, ಆಶಾಕಾರ್ಯಕರ್ತರು ಮನೆ ಮನೆಗಳಲ್ಲಿ ತೆರಳಿ ಸಮೀಕ್ಷೆ ಮಾಡಿ, ಚಿಕೂನ್‍ಗುನ್ಯ, ಡೆಂಗ್ಯೂ, ಮಲೇರಿಯಾ ಬಗ್ಗೆ ಮಾಹಿತಿ ನೀಡುತ್ತಿದ್ದು, ಸಾರ್ವಜನಿಕರು ತಮ್ಮ ಮನೆಯ ಒಳಾಂಗಣ ಮತ್ತು ಹೊರಾಂಗಣಗಳನ್ನು ಶುಚಿಯಾಗಿಟ್ಟುಕೊಳ್ಳುವಂತೆ ಸಲಹೆ ನೀಡಲಾಗುತ್ತಿದೆ.

ಇಂದು ತೊರೆನೂರು ಮತ್ತು ಕಣಿವೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಸಭೆ ನಡೆಸಿ, ಶುಚಿತ್ವ ಕಾಪಾಡಿಕೊಳ್ಳಲು ಹಾಗೂ ಜ್ವರದ ಮುನ್ಸೂಚನೆಗಳು ಕಂಡುಬಂದಲ್ಲಿ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಮಾಹಿತಿ ನೀಡಲಾಯಿತು.

ಈ ಸಂದರ್ಭ ತೊರೆನೂರು ಆರ್ಯುವೇದಿಕ್ ಆಸ್ಪತ್ರೆಯ ಡಾ.ಅಮೂಲ್ಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಹಿರಿಯ ಆರೋಗ್ಯ ಸಹಾಯಕರಾದ ನಾಗೇಂದ್ರ ಆಚಾರ್ಯ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಟಿ.ಕೆ.ಪಾಂಡುರಂಗ, ಸೇರಿದಂತೆ ಶಿರಂಗಾಲ, ತೊರೆನೂರು ವ್ಯಾಪ್ತಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.