ಮಡಿಕೇರಿ, ಜು. 24: ಪ್ರಕೃತಿ ವಿಕೋಪ ನಿರ್ವಹಣೆ ಸಂಬಂಧ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ಮತ್ತಷ್ಟು ನಿಗಾವಹಿಸಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಲಹೆ ಮಾಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಸಂಬಂಧಿಸಿದ ಜಿಲ್ಲಾ ಮಟ್ಟದ ಹಾಗೂ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಮಳೆ ಬಿರುಸುಗೊಂಡಿದ್ದು, ಈ ಸಮಯದಲ್ಲಿ ಅಧಿಕಾರಿಗಳು ತೃಪ್ತಿಕರವಾಗಿ ಕಾರ್ಯನಿರ್ವಹಿಸಿದ್ದು, ಮುಂದೆಯೂ ಇದೇ ರೀತಿಯಾಗಿ ಕೆಲಸ ನಿರ್ವಹಿಸುವಂತೆ ತಿಳಿಸಿದರು.

ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು ಪರಿಹಾರ ಕೇಂದ್ರಗಳ ಸ್ಥಾಪನೆ ಹಾಗೂ ಅಗತ್ಯತೆ ಬಗ್ಗೆ ಸಭೆಯಲ್ಲಿ ಮಾಹಿತಿ ಕೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಇದುವರೆಗೂ ಜಿಲ್ಲೆಯಲ್ಲಿ ಯಾವದೇ ಪರಿಹಾರ ಕೇಂದ್ರಗಳನ್ನು ತೆರೆದಿರುವದಿಲ್ಲ. ಅಗತ್ಯವಿದ್ದ ಸಂದರ್ಭದಲ್ಲಿ ಪರಿಹಾರ ಕೇಂದ್ರಗಳನ್ನು ತೆರೆಯಲಾಗುವದು. ಈ ನಿಟ್ಟಿನಲ್ಲಿ ಎಲ್ಲಾ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿರುವದಾಗಿ ಸಭೆಗೆ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಸಂಪಾಜೆ ವ್ಯಾಪ್ತಿಯ ನೋಡಲ್ ಅಧಿಕಾರಿ ಮಚ್ಚಾಡೋ ಅವರು ಸಂಪಾಜೆ ವ್ಯಾಪ್ತಿಯಲ್ಲಿ ದೂರವಾಣಿ ಸಂಪರ್ಕ ಸಮಸ್ಯೆ ಇದ್ದು, ತುರ್ತು ಸಂದರ್ಭದಲ್ಲಿ ಇದರಿಂದ ತುಂಬಾ ಅನಾನುಕೂಲವಾಗಲಿದೆ. ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರಲ್ಲಿ ಮನವಿ ಮಾಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜು ಮಾತನಾಡಿ ರಸ್ತೆಯ ಇಕ್ಕೆಲಗಳಲ್ಲಿ ಇರುವಂತಹ ಚರಂಡಿಯಲ್ಲಿನ ಮಣ್ಣನ್ನು ತೆರವುಗೊಳಿಸಿ ಸರಾಗವಾಗಿ ನೀರು ಹೋಗುವಂತೆ ಕ್ರಮಕೈಗೊಳ್ಳಲು ಮುಂದಾಗಬೇಕಿದೆ ಎಂದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಮಳೆ ಉಂಟಾದ ಸಂದರ್ಭದಲ್ಲಿ ಶಾಲೆಗೆ ಮಕ್ಕಳು ತೆರಳಲು ಯಾವದೇ ಸಮಸ್ಯೆ ಆಗದಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು 24x7 ಲಭ್ಯವಿರಬೇಕು. ಹಾಗೂ ಯಾವದೇ ಸಮಸ್ಯೆ ಇದ್ದಲ್ಲಿ ಅಧಿಕಾರಿಗಳು ತಮ್ಮ ಗಮನಕ್ಕೆ ತರಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಮೋಹನ್ ಅವರು ಆರೋಗ್ಯ ಸಂಬಂಧಿಸಿದಂತೆ ಪ್ರಕೃತಿ ವಿಕೋಪ ನಿರ್ವಹಣೆ ಹಾಗೂ ತುರ್ತು ಸಂದರ್ಭಕ್ಕೆ 24x7 ಸಹಾಯವಾಣಿ 08272-220606 ತೆರೆಯಲಾಗಿದ್ದು, ಹಾಗೂ 8 ಹಾಸಿಗೆಯ ತುರ್ತು ನಿಗಾ ಘಟಕ ಪ್ರಾರಂಭಿಸಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಈಗಾಗಲೇ ಎನ್‍ಡಿಆರ್‍ಎಫ್ ತಂಡವು ತುರ್ತು ಸಂದರ್ಭ ಎದುರಾದಲ್ಲಿ ಕಾರ್ಯನಿರ್ವಹಿಸಲು ಸನ್ನದ್ದವಾಗಿದ್ದು, ಯಾವದಾದರೂ ಸಮಸ್ಯೆ ಉದ್ಭವಿಸಿದಲ್ಲಿ ಅಂತಹ ಸ್ಥಳಗಳಿಗೆ ನಿಯೋಜಿಸಲಾಗುವದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಮಾತನಾಡಿ ಈಗಾಗಲೇ ಪ್ರಕೃತಿ ವಿಕೋಪ ನಿರ್ವಹಣೆಗೆ ನಿಯೋಜನೆ ಗೊಂಡಿರುವ ಅಧಿಕಾರಿಗಳ ತಂಡವು ಉತ್ತಮ ರೀತಿಯಲ್ಲಿ ಕಾರ್ಯನಿರ್ವ ಹಿಸುತ್ತಿ ರುವದು ಸಾರ್ವಜನಿಕರಲ್ಲಿ ಉತ್ತಮ ಸಂದೇಶ ನೀಡಿದ್ದು, ಮದೆನಾಡಿನಲ್ಲಿ ಇತ್ತೀಚೆಗೆ ಮಣ್ಣು ಕುಸಿತ, ವಿದ್ಯುತ್ ಕಂಬಗಳು ಉರುಳಿದ ಸಂದರ್ಭದಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಿದ್ದು ಶ್ಲಾಘನೀಯವಾದದ್ದು.

ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯಾ ಅವರು ಮಾತನಾಡಿ ಹೊಸದಾಗಿ ಜಿಲ್ಲೆಗೆ ವರ್ಗಾವಣೆಗೊಂಡು ಬಂದಿರುವ ಅಧಿಕಾರಿಗಳು ಪ್ರಗತಿಯಲ್ಲಿರುವ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಸಲಹೆ ಮಾಡಿದರು.

ಎಲ್ಲಾ ನೋಡಲ್ ಅಧಿಕಾರಿಗಳಿಗೆ ಅಗತ್ಯವಿರುವ ತುರ್ತು ಸಲಕರಣೆ ಗಳಾದ ಟಾರ್ಚ್, ಶೂ, ಜರ್ಕಿನ್ ವಿತರಿಸಲು ಕ್ರಮಕೈಗೊಳ್ಳಲಾಗುವದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹಾ ತಿಳಿಸಿದರು.

ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳು, ಇತರರು ಇದ್ದರು.