ಮಡಿಕೇರಿ, ಜು. 30: ಮಕ್ಕಳಲ್ಲಿ ಪ್ರೀತಿ, ವಿಶ್ವಾಸ, ಮಾನವೀಯತೆ ಭಿತ್ತಿ ಸುಶಿಕ್ಷಿತ ಮತ್ತು ಸುರಕ್ಷಿತ ಸಾಕ್ಷರರನ್ನಾಗಿ ಮಾಡುವಂತಾಗಬೇಕು ಎಂದು ರಾಜ್ಯ ಮಕ್ಕಳ ಆಯೋಗದ ಸದಸ್ಯ ಪರಶುರಾಮ್ ಸಲಹೆಯಿತ್ತರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ವಸತಿ ನಿಲಯಗಳಲ್ಲಿ ಮಕ್ಕಳ ಸುರಕ್ಷತೆ ಮತ್ತು ರಕ್ಷಣಾ ನೀತಿಗೆ ಸಂಬಂಧಿಸಿದಂತೆ ವಸತಿ ನಿಲಯಗಳ ಮೇಲ್ವಿಚಾರಕರಿಗೆ ಏರ್ಪಡಿಸಲಾಗಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಸುರಕ್ಷತೆ ಜೊತೆಗೆ ಮಕ್ಕಳ ವಿದ್ಯಾರ್ಜನೆಗೆ ಹೆಚ್ಚಿನ ಒತ್ತು ನೀಡುವಂತಾಗಬೇಕು.
ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನಹರಿಸಲು ಮತ್ತು ಭವಿಷ್ಯ ರೂಪಿಸಿಕೊಳ್ಳುವತ್ತ ಸಲಹೆ, ಮಾರ್ಗದರ್ಶನ ನೀಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರು ನುಡಿದರು.
ವಕೀಲರಾದ ಬಾಬುರಾಜ್ ಮಾತನಾಡಿ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವಂತಾಗಬೇಕು. ಯೋಜನೆ, ಚಟುವಟಿಕೆಗಳ ಬಗ್ಗೆ ಮಾರ್ಗದರ್ಶನ ನೀಡಬೇಕು. ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಯಲು ಮುಂದಾಗಬೇಕು ಎಂದರು.
ವಿದ್ಯಾರ್ಥಿ ನಿಲಯಗಳಲ್ಲಿ ಎಲ್ಲಾ ಮಕ್ಕಳನ್ನು ಸರಿ ಸಮಾನವಾಗಿ ಕಾಣಬೇಕು. ಯಾವದೇ ಕಾರಣಕ್ಕೂ ತಾರತಮ್ಯ ಅನುಸರಿಸಬಾರದು. ನೀತಿಗಳು, ಕಾಯ್ದೆ, ಕಾರ್ಯಕ್ರಮಗಳು, ಯೋಜನೆಗಳು ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಬಾಬು ರಾಜ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಉಷಾ ಅಯ್ಯಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸವಿತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಮೃತ್ಯುಂಜಯ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯವಸ್ಥಾಪಕರಾದ ಜಯಂತಿ, ವಕೀಲರಾದ ದಿವ್ಯ, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಇತರರು ಇದ್ದರು.