ಮಡಿಕೇರಿ, ಜು.30; ನಗರದಲ್ಲಿ ನಿರ್ಮಾಣವಾಗುತ್ತಿರುವ ನೆಹರು ಪಾರ್ಕ್‍ಗೆ ಸಂಬಂಧಿಸಿದಂತೆ ಸಣ್ಣ ಪುಟ್ಟ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಿ ಹಾಗೂ ಸುತ್ತಮುತ್ತಲೂ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಲಹೆ ಮಾಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಾಸೀಟು ಅಭಿವೃದ್ಧಿ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ನೆಹರು ಪಾರ್ಕ್‍ನ್ನು ಆದಷ್ಟು ಬೇಗ ಪ್ರವಾಸಿಗರ ವೀಕ್ಷಣೆಗೆ ಅನುಕೂಲ ಮಾಡಿಕೊಡಬೇಕು. ರಾಜಾಸೀಟು ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ರಾಜಾಸೀಟು ನಿರ್ವಹಣೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಉದ್ಯಾನವನದಲ್ಲಿ ಪ್ರವಾಸಿಗರಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು. ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ರಾಜಾಸೀಟು ಉದ್ಯಾನ ನಿರ್ವಹಣೆ ಮಾಡಬೇಕು ಎಂದು ನಿರ್ದೇಶನ ನೀಡಿದರು.

ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ದೇವಕಿ ಅವರು ರಾಜಾಸೀಟು ಹಾಗೂ ಉದ್ಯಾನವನದಲ್ಲಿ ಆಗಬೇಕಿರುವ ಕಾರ್ಯಗಳ ಬಗ್ಗೆ ಸಭೆಯ ಗಮನಕ್ಕೆ ತಂದರು. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ, ಲೋಕೋಪಯೋಗಿ ಇಲಾಖೆಯ ಇಇ ಇಬ್ರಾಹಿಂ, ಪೌರಾಯುಕ್ತ ರಮೇಶ್ ಇತರರು ಇದ್ದರು.