ಮಡಿಕೇರಿ, ಆ. 1 : ಭಾಗಮಂಡಲ ಭಗಂಡೇಶ್ವರ ದೇವಾಲಯದಲ್ಲಿ ಗುರುವಾರ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವ ವಿಶೇಷ ಪೂಜೆ ಜರುಗಿತು.

ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮಹಾಗಣಪತಿ, ಮಹಾವಿಷ್ಣು, ಸುಬ್ರಹ್ಮಣ್ಯ, ಭಗಂಡೇಶ್ವರ ದೇವರುಗಳಿಗೆ ಪೂಜೆ ಸಲ್ಲಿಸಿ, ಬಳಿಕ ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣಗಳನ್ನು ಹಾಕಿ ವಿಶೇಷ ಪೂಜೆ ನೆರವೇರಿಸಿ ಭಗಂಡೇಶ್ವರ ದೇವಾಲಯದ ಸುತ್ತ ಪ್ರದಕ್ಷಿಣೆ ಮಾಡಲಾಯಿತು. ಉತ್ತಮ ಮಳೆಯಾಗಿ ನಾಡಿಗೆ, ರೈತರಿಗೆ ಸಮೃದ್ಧಿ ತರುವಂತಾಗಬೇಕು ಎಂದು ತಕ್ಕ ಮುಖ್ಯಸ್ಥರಾದ ಬಲ್ಲಡ್ಕ ಅಪ್ಪಾಜಿ ಅವರು ದೇವರಲ್ಲಿ ಪ್ರಾರ್ಥಿಸಿದರು. ಬಳಿಕ ತ್ರಿವೇಣಿ ಸಂಗಮದಲ್ಲಿ ಪೂಜಾ ವಿಧಿ ವಿಧಾನ ಗಳನ್ನು ಕೈಗೊಂಡು ವಿಸರ್ಜಿಸಲಾಯಿತು. ಪೊಲಿಂಕಾನ ಉತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು.

ಭಾಗಮಂಡಲ-ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ, ಭಾಗಮಂಡಲ ದೇವಾಲಯದ ಪ್ರಧಾನ ಅರ್ಚಕ ಹರೀಶ್‍ಭಟ್, ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ, ಗ್ರಾಮಸ್ಥರಾದ ಕುದುಕುಳಿ ಭರತ್, ದೇವಾಲಯ ವ್ಯವಸ್ಥಾಪನಾ ಸಮಿತಿಯ ಕಾರ್ಯನಿರ್ವಹಣಾ ಅಧಿಕಾರಿ ಜಗದೀಶ್ ಕುಮಾರ್, ಸಮಿತಿ ಸದಸ್ಯರಾದ ಉದಿಯಂಡ ಸುಭಾಸ್, ಅಣ್ಣಯ್ಯ, ಮೀನಾಕ್ಷಿ, ಪಾರು ಪತ್ತೆಗಾರ ಪೊನ್ನಣ್ಣ, ಪ್ರಮುಖರಾದ ಎಂ.ಬಿ. ದೇವಯ್ಯ, ರಾಜಾ ರೈ, ಪುರುಷೋತ್ತಮ ಇತರರು ಇದ್ದರು.