ಮಡಿಕೇರಿ, ಆ.1: ಜಿಲ್ಲಾಡಳಿತ ವತಿಯಿಂದ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ತಾ. 15 ರಂದು ಸ್ವಾತಂತ್ರ್ಯ ದಿನಾಚರಣೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳು ಕೈಜೋಡಿಸಿ ಸ್ವಾತಂತ್ರ್ಯ ದಿನಾಚರಣೆ ಯಶಸ್ವಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋರಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು. ಹಾಗೆಯೇ ಸರ್ಕಾರದ ಶಿಷ್ಟಾಚಾರದಂತೆ ಅಚ್ಚುಕಟ್ಟಾಗಿ ಆಚರಿಸಲು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.

ಆಚರಣೆ ಸಂಬಂಧ ರಚಿಸಲಾಗಿರುವ ಸಮಿತಿಯ ಮುಖ್ಯಸ್ಥರು ತಮ್ಮ ಹಂತದಲ್ಲಿ ಸಭೆ ನಡೆಸಿ ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಇದೇ ಸಂದರ್ಭದಲ್ಲಿ ಸೂಚಿಸಿದರು.

ಸ್ವಾತಂತ್ರ್ಯ ದಿನಾಚರಣೆ ಇಡೀ ದೇಶದ ಎಲ್ಲರ ಸಂಭ್ರಮದ ಆಚರಣೆ ಯಾಗಿದ್ದು, ಸ್ವಯಂ ಪ್ರೇರಣೆಯಿಂದ ಎಲ್ಲರೂ ಭಾಗವಹಿಸಬೇಕು. ತಾ. 15 ರಂದು ಬೆಳಗ್ಗೆ ನಗರದ ಕೋಟೆ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು, ಹಾಜರಾತಿಯಲ್ಲಿ ತಪ್ಪದೆ ಸಹಿ ಮಾಡಬೇಕು ಎಂದು ಸೂಚನೆ ನೀಡಿದರು.

ವಾಟರ್‍ಫ್ರೂಫ್ ವೇದಿಕೆ ನಿರ್ಮಾಣ ಮಾಡುವಂತೆ ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಎಂಜಿನಿಯರ್ ಗಳಿಗೆ ಸೂಚನೆ ನೀಡಿದರು.

ಅಭ್ಯಾಸದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಲಘು ಉಪಹಾರ, ಕುಡಿಯುವ ನೀರು ವ್ಯವಸ್ಥೆ ಮಾಡುವಂತೆ ನಗರಸಭೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಹೇಳಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಶಾಲಾ ಮಕ್ಕಳಿಗೆ ಅಂದು ಬೆಳಗ್ಗೆ ಉಪಹಾರ ವ್ಯವಸ್ಥೆ ಮಾಡುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಕಾವೇರಿ ಕಲಾಕ್ಷೇತ್ರದಲ್ಲಿ ಸಂಜೆ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಜಿ.ಪಂ. ಉಪಕಾರ್ಯದರ್ಶಿ ಗುಡೂರು ಭೀಮಸೇನ, ಲೋಕೋಪಯೋಗಿ ಹಾಗೂ ಪಂಚಾಯತ್‍ರಾಜ್ ಇಲಾಖೆಯ ಎಂಜಿನಿಯರ್‍ಗಳು, ನಾನಾ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಪ್ರಾಂಶುಪಾಲರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದು ಹಲವು ಸಲಹೆ ನೀಡಿದರು.