ಸಿದ್ದಾಪುರ. ಆ. 4 : ಇಲ್ಲಿನ ಮಾರ್ಕೆಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿಗಳು ಭೇಟಿ ನೀಡಿ ಸಾಂಕ್ರಾಮಿಕ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಪತ್ರಿಕೆಗಳಲ್ಲಿ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಜಿಲ್ಲಾ ಆರೋಗ್ಯ ಇಲಾಖೆ ಜ್ವರ ಪ್ರಕರಣಗಳು ಹೆಚ್ಚು ಭಾದಿಸಿರುವ ಪ್ರದೇಶಗಳಿಗೆ ಭೇಟಿ ನೀಡಿ ಜ್ವರ ಮತ್ತು ಯಾವದೇ ಸೋಂಕುಗಳು ಹರಡದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಿದರು. ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವದಲ್ಲದೆ ಮನೆಯ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ಹಾಗೂ ಕಸವನ್ನು ಎಲ್ಲೆಂದರಲ್ಲಿ ಹಾಕದಂತೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಜಿಲ್ಲಾ ಸವೇಕ್ಷಣಾಧಿಕಾರಿ ಶಿವಕುಮಾರ್ ಪ್ರಸ್ತುತ ಸಮಯದಲ್ಲಿ ಯಾವದೇ ಸೋಂಕು ಇರುವ ವ್ಯಕ್ತಿಗಳು ಸೋಂಕು ಮತ್ತೊಬ್ಬರಿಗೆ ಹರಡದಂತೆ ತಡೆಯಲು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದರು.