ಮಡಿಕೇರಿ, ಆ. 6: ಮಡಿಕೇರಿಯ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದಲ್ಲಿ ನೂತನವಾಗಿ ನಿರ್ಮಿಸಲಾದ ಸೈನ್ಸ್ ಪಾರ್ಕ್‍ನ್ನು ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ಎಸ್. ಮಚ್ಚಾಡೋ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಮಚ್ಚಾಡೋ, ವಿದ್ಯಾರ್ಥಿಗಳು ತಮ್ಮ ಮನಸ್ಸಿನಲ್ಲಿ ಮೂಡುವ ಸಂಶಯಗಳಿಗೆ ತರಗತಿಗಳಲ್ಲಿ ಶಿಕ್ಷಕರೊಂದಿಗೆ ಮಾತನಾಡಿ ಉತ್ತರ ಕಂಡುಕೊಳ್ಳಬೇಕು. ವಿದ್ಯಾರ್ಥಿಗಳಿಂದ ಹೆಚ್ಚು ಹೆಚ್ಚು ಪ್ರಶ್ನೆಗಳು ಮೂಡಿಬರಬೇಕು. ಇಂಥ ಪ್ರಶ್ನೆಗಳೇ ಹೊಸ ಅವಿಷ್ಕಾರಗಳಿಗೆ ಕಾರಣವಾಗುತ್ತದೆ ಎಂದರು. ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಬಿ.ಕೆ.ಸುಬ್ಬಯ್ಯ ಶಾಲೆಯಲ್ಲಿ ನಿರ್ಮಿಸಲಾದ ಚಿಗುರು ಹೆಸರಿನ ನೂತನ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿ, ತಮ್ಮ ಸಂಸ್ಥೆಯು ಸರ್ಕಾರದ ಹೊಸ ಶಿಕ್ಷಣ ನೀತಿಯನ್ನು ಅನುಸರಿಸಿ ಅಗತ್ಯ ಬದಲಾವಣೆಗಳನ್ನು ಮಾಡಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದರು. ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ಜಿಲ್ಲಾಧ್ಯಕ್ಷ ಕೆ.ಎಸ್.ದೇವಯ್ಯ ಸೈನ್ಸ್ ಪಾರ್ಕ್‍ನಂಥ ವಿನೂತನ ಯೋಜನೆ ಶಾಲೆಯಲ್ಲಿ ಕಾರ್ಯಾರಂಭ ಮಾಡಿದ್ದು ಶ್ಲಾಘನೀಯ ಎಂದರು.
ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ಕಾರ್ಯದರ್ಶಿ ಬಾಲಾಜಿ ಕಶ್ಯಪ್, ಶಾಲಾ ಆಡಳಿತ ಮಂಡಳಿ ಸದಸ್ಯೆ ಶಾರದಾ ಮಂದಪ್ಪ, ಶಾಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾಹರೀಶ್, ಉಪಪ್ರಾಂಶುಪಾಲೆ ವನಿತಾ, ವ್ಯವಸ್ಥಾಪಕ ರವಿ ವೇದಿಕೆಯಲ್ಲಿದ್ದರು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕ ವರ್ಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತ್ತು.