ಮಡಿಕೇರಿ, ಆ. 16: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿಯಲ್ಲಿ ಅಂತರಿಕ ಗುಣಮಟ್ಟ ಭರವಸೆ ಕೋಶ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೆಡ್ ರಿಬ್ಬನ್ ಕ್ಲಬ್ ಮತ್ತು ರೆಡ್ ಕ್ರಾಸ್ ಘಟಕ ಹಾಗ್ತೂ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ ಚಿತ್ರಾ ವೈ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಗರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಮಾತನಾಡಿದರು. ಎಲ್ಲಾ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಇರಬೇಕು ಎಂದು ತಿಳಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ಕೆ.ಸಿ. ದಯಾನಂದ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ರಾಘವೇಂದ್ರ ಪ್ರಸಾದ್ ವಂದಿಸಿದರು. ಜಿ.ಎಸ್. ದಿವ್ಯ ಪ್ರಾರ್ಥಿಸಿದರು. ಸಂಚಾಲಕಿ ಕೆ.ಕೆ. ಮುತ್ತಮ್ಮ ಹಾಗೂ ಬೋಧಕ, ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.