ಮಡಿಕೇರಿ, ಆ.16: ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 4 ರವರೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ರ್ಯಾಲಿ ಆಯೋಜಿಸಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಲ್ ಎಂ.ಎಸ್.ಸೆಬಿಯಾ, ಜಿಲ್ಲಾ ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಲೆ.ಕರ್ನಲ್ ಗೀತಾ, ನೋಡಲ್ ಅಧಿಕಾರಿ ಸಿ.ಜಗನ್ನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಪೌರಾಯುಕ್ತ ಎಂ.ಎಲ್.ರಮೇಶ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ ಬಾಯಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಧನಂಜಯ ಇತರರ ಉಪಸ್ಥಿತಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೇನಾ ನೇಮಕಾತಿ ರ್ಯಾಲಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಸೇನಾ ನೇಮಕಾತಿ ರ್ಯಾಲಿ ಸಂಬಂಧಿಸಿದಂತೆ ರಚಿಸಲಾಗಿರುವ ಸಮಿತಿ ಸಂಪೂರ್ಣ ಕಾರ್ಯ ಪ್ರವೃತ್ತರಾಗಿ ಸೇನಾ ರ್ಯಾಲಿಯನ್ನು ಯಶಸ್ವಿಗೊಳಿಸಬೇಕೆಂದು ಸಮಿತಿ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.
ಸೇನಾ ನೇಮಕಾತಿ ರ್ಯಾಲಿ ನಡೆಯುವ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ತಂಡ, ಆಂಬುಲೆನ್ಸ್ ಸೇವೆ, ಅಗ್ನಿ ಶಾಮಕದಳದ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಕುಡಿಯುವ ನೀರು, ಸ್ವಚ್ಛತೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು. ನೇಮಕಾತಿ ರ್ಯಾಲಿ ಸಂದರ್ಭದಲ್ಲಿ ಆಗಮಿಸುವ ಸಿಬ್ಬಂದಿಗಳಿಗೆ ವಸತಿ ಕಲ್ಪಿಸುವದು ಮತ್ತಿತರ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಕರ್ನಾಟಕ ಮತ್ತು ಕೇರಳ ವಿಭಾಗದ ಸೇನಾ ನೇಮಕಾತಿ ಮುಖ್ಯಸ್ಥರಾದ ಕರ್ನಲ್ ಎಂ.ಎಸ್.ಸೆಬಿಯಾ ಅವರು ಮಾತನಾಡಿ ನೇಮಕಾತಿ ರ್ಯಾಲಿಯು 6 ದಿನಗಳ ಕಾಲ ನಡೆಯಲಿದು,್ದ ದೇಹದಾಡ್ರ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲಾತಿ ಪರಿಶೀಲನೆ ನಡೆಯಲಿದೆ. ಇದಕ್ಕೆ ಸಂಬಂಧಿಸಿದ ಸೇನಾ ನೇಮಕಾತಿ ರ್ಯಾಲಿಯ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು.