ಮಡಿಕೇರಿ, ಆ. 19: ವಿದ್ಯಾರ್ಥಿಗಳು ದೇಶದ ವಿಜ್ಞಾನಿಗಳ ಸಂಶೋಧನೆ ಮತ್ತು ಅವರ ಸಾಧನೆಗಳ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸುವ ಮೂಲಕ ಹೊಸ ಅನ್ವೇಷಣೆಯಲ್ಲಿ ತೊಡಗಿಸಿಕೊಂಡು ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ರೂಪುಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಮಚ್ಚಾಡೋ ಕರೆ ನೀಡಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ರೋಟರಿ ಮಿಸ್ಟಿ ಹಿಲ್ಸ್ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಸಭಾಂಗಣದಲ್ಲಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಆಯ್ಕೆಯ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ರೆಡ್‍ಕ್ರಾಸ್ ಸಂಸ್ಥೆಯ ಬಿ.ಕೆ. ರವೀಂದ್ರ ರೈ, ಮಿಸ್ಟಿ ಹಿಲ್ಸ್‍ನ ಜಗದೀಶ್, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿದರು ಸಂಯೋಜಕ ಟಿ.ಜಿ. ಪ್ರೇಮಕುಮಾರ್, ಸಂಪನ್ಮೂಲ ವ್ಯಕ್ತಿ ಜಿ. ಶ್ರೀನಾಥ್ ಮಾಹಿತಿ ನೀಡಿದರು.

ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ. ಕೆಂಚಪ್ಪ, ನೋಡಲ್ ಅಧಿಕಾರಿ ಎಸ್.ಟಿ. ವೆಂಕಟೇಶ್, ಪ್ರಾಂಶುಪಾಲ ಪಿ.ಆರ್. ವಿಜಯ್, ಉಪನ್ಯಾಸಕ ಎಸ್.ಹೆಚ್. ಈಶ, ಪರಿಷತ್ತಿನ ಸದಸ್ಯ ಹ್ಯೂಬರ್ಟ್ ಡಯಾಸ್, ಮಾರ್ಗದರ್ಶಿ ಶಿಕ್ಷಕರು ಇದ್ದರು.

ಯುವ ವಿಜ್ಞಾನಿಗಳ ಆಯ್ಕೆ

ವಿಜ್ಞಾನ ಪರಿಷತ್ತು ವತಿಯಿಂದ ಮೂವರು ಯುವ ವಿಜ್ಞಾನಿಗಳು ಆಯ್ಕೆಗೊಂಡಿದ್ದಾರೆ. ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಭವನದ ಪಿ. ಚಿನ್ಮಯ ಪ್ರಥಮ, ಇದೇ ಸಂಸ್ಥೆಯ ಲೇಖನ ಮುತ್ತಕ್ಕ ದ್ವಿತೀಯ ಹಾಗೂ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಬಿ.ಸಿ. ಅಭಿಜ್ಞಾನ್ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸೆಪ್ಟೆಂಬರ್ ಮೊದಲ ವಾರ ಬಳ್ಳಾರಿಯಲ್ಲಿ ನಡೆಯುವ ರಾಜ್ಯಮಟ್ಟದ ಸಮಾವೇಶದಲ್ಲಿ ಈ ಯುವ ವಿಜ್ಞಾನಿಗಳು ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.