ಸೋಮವಾರಪೇಟೆ, ಆ. 23: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಸೋಮವಾರಪೇಟೆ ತಾಲೂಕು ಸಂಸ್ಥೆ ವತಿಯಿಂದ ಸ್ಥಳೀಯ ಚನ್ನಬಸಪ್ಪ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ಕಾರ್ಯಕ್ರಮ ನಡೆಯಿತು.

ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಪ.ಪಂ. ಸದಸ್ಯೆ ನಳಿನಿ ಗಣೇಶ್, ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ದೇಶಪ್ರೇಮ ಹೆಚ್ಚುತ್ತಿರುವದರಿಂದ ದೇಶ ಇನ್ನಷ್ಟು ಬಲಿಷ್ಠವಾಗುತ್ತಿದೆ ಎಂದು ಅಭಿಪ್ರಾಯಿಸಿದರು.

ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯಿಂದ ಪಾಲ್ಗೊಳ್ಳಬೇಕು. ಅದರೊಂದಿಗೆ ಸ್ಕೌಟ್ಸ್ ಮತ್ತು ಗೈಡ್ಸ್‍ನಂತಹ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಶಿಸ್ತು, ಸಮಯ ಪಾಲನೆ, ಸೇವಾ ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಯಾಗಿ ರೂಪುಗೊಳ್ಳು ವಂತಾಗಬೇಕೆಂದು ಕರೆ ನೀಡಿದರು.

ಸೋಮವಾರಪೇಟೆ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಪದವೀಧರ ಮುಖ್ಯಶಿಕ್ಷಕಿ ಎಂ.ಜೆ. ಅಣ್ಣಮ್ಮ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಚಿಂತನಾಶೀಲ ಗುಣಗಳಿರಬೇಕು. ತಮ್ಮ ಬಾಲ್ಯದಲ್ಲಿಯೇ ಶಿಸ್ತು, ಸಂಯಮ ಗಳೊಂದಿಗೆ ದೇಶಭಕ್ತಿಯನ್ನೂ ಕಲಿತು, ಅದನ್ನು ಮೈಗೂಡಿಸಿಕೊಂಡು, ಭವಿಷ್ಯದ ಜೀವನದಲ್ಲಿ ಅಳವಡಿಸಿಕೊಂಡರೆ ಅದು ಸಾರ್ಥಕ ಜೀವನವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತಾಲೂಕು ಅಧ್ಯಕ್ಷ ಬಿ.ಎ. ಭಾಸ್ಕರ್ ವಹಿಸಿದ್ದರು. ವೇದಿಕೆಯಲ್ಲಿ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಎಸ್. ಶರಣ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟಿ.ಎಸ್. ಚಂದ್ರಶೇಖರ್, ಸ್ಕೌಟ್ ಮಾಸ್ಟರ್ ಆಲೂರು-ಸಿದ್ದಾಪುರ ರಮೇಶ್ ಉಪಸ್ಥಿತರಿದ್ದರು.