ಕೂಡಿಗೆ, ಆ. 28: ಹೆಬ್ಬಾಲೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯು ಗ್ರಾ.ಪಂ. ಉಪಾಧ್ಯಕ್ಷೆ ಪದ್ಮ ಅಧ್ಯಕ್ಷತೆಯಲ್ಲಿ ನಡೆಯಿತು. ಕಳೆದ ಎಂಟು ತಿಂಗಳಿನಿಂದ ಹೆಬ್ಬಾಲೆ ಗ್ರಾಮ ಪಂಚಾಯಿತಿಗೆ ಸೇರಿದ ಮುಖ್ಯರಸ್ತೆಯಲ್ಲಿರುವ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆಯು ಸ್ಥಗಿತಗೊಂಡಿತ್ತು. ಇದೀಗ ಗ್ರಾಮ ಪಂಚಾಯಿತಿ ಮಾಸಿಕ ಸಭೆಯಲ್ಲಿ ಗ್ರಾಮ ಪಂಚಾಯಿತಿಗೆ ಆದಾಯ ಬರುವ ಹಿತದೃಷ್ಟಿಯಿಂದ ನಿಯಮಾನುಸಾರ ಹರಾಜು ಪ್ರಕ್ರಿಯೆ ನಡೆಸುವಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಅಂಗಡಿ ಮಳಿಗೆ ಹರಾಜು ಪ್ರಕ್ರಿಯೆ ವಿಚಾರವಾಗಿ ಕಳೆದ 8 ತಿಂಗಳ ಹಿಂದೆ ಪರ-ವಿರುದ್ಧ ಚರ್ಚೆ ನಡೆದು, ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಇದೀಗ ಸದಸ್ಯರ ಅಭಿಪ್ರಾಯಗಳನ್ನು ಸಂಗ್ರಹಿಸಿ ಹರಾಜು ನಡೆಸುವಂತೆ ಸಭೆಯಲ್ಲಿ ನಿರ್ಣಯ ಕೈಗೊಂಡು ಹರಾಜು ಪ್ರಕ್ರಿಯೆಯ ಅಧಿಕಾರವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ನೀಡಲಾಗಿದೆ.

ಪ್ರಕೃತಿ ವಿಕೋಪದಿಂದ ಹಾನಿ ಗೊಳಗಾಗಿ ವಸತಿ ಕಳೆದುಕೊಂಡಿರುವವರಿಗೆ ಶೀಘ್ರವಾಗಿ ಸರ್ಕಾರದ ಯೋಜನೆಯಡಿಯಲ್ಲಿ ಮನೆ ನಿರ್ಮಿಸಿಕೊಡುವ ಬಗ್ಗೆ ಚರ್ಚೆ ನಡೆದವು. ಅಭಿವೃದ್ಧಿ ಅಧಿಕಾರಿ ರಾಕೇಶ್ ಹಾಗೂ ಸರ್ವ ಸದಸ್ಯರು ಸಭೆಯಲ್ಲಿ ಇದ್ದರು.