ಮಡಿಕೇರಿ, ಆ.28 : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಈ ಹಿಂದೆ ಕೇಂದ್ರ ಸರ್ಕಾರ ಘೋಷಿಸಿದ್ದ ರೂ.1,500 ಮತ್ತು ರೂ.750 ಹೆಚ್ಚುವರಿ ಗೌರವ ವೇತನವನ್ನು ಇಲ್ಲಿಯವರೆಗೆ ಬಿಡುಗಡೆ ಮಾಡಿಲ್ಲವೆಂದು ಮಡಿಕೇರಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘ ಬೇಸರ ವ್ಯಕ್ತಪಡಿಸಿದೆ. ಘೋಷಣೆಯಾಗಿರುವ ವೇತನವನ್ನು ತಕ್ಷಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೂತನ ಸಚಿವರಿಗೆ ಮನವಿ ಮಾಡಿಕೊಳ್ಳಲು ಸಂಘ ನಿರ್ಧರಿಸಿದೆ.

ಸಂಘದ ಅಧ್ಯಕೆÀ್ಷ ಕೆ.ಎಸ್. ಮುತ್ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ವೇತನ ಸಿಗದೆ ಇರುವ ಬಗ್ಗೆ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಅಸಮಾಧಾನ ವ್ಯಕ್ತಪಡಿಸಿದರು.

ಜುಲೈ ತಿಂಗಳ ಗೌರವ ವೇತನ ಇನ್ನೂ ಕೂಡ ಬಿಡುಗಡೆಯಾಗದೆ ಇರುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಗಮನ ಸೆಳೆಯಲಾಗುವದು. ಮುಂದಿನ ದಿನಗಳಲ್ಲಿ ಸಕಾಲದಲ್ಲಿ ವೇತನ ಸಿಗದಿದ್ದಲ್ಲಿ ಹಿರಿಯ ಅಧಿಕಾರಿಗಳು, ಜಿಲ್ಲಾ ಉಪ ನಿರ್ದೇಶಕರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಭೆ ನಿರ್ಧರಿಸಿತು.

ಸಭೆಯಲ್ಲಿ ಸಂಘದ ಸಲಹೆಗಾರ ಟಿ.ಪಿ.ರಮೇಶ್, ಕಾರ್ಯದರ್ಶಿ ಅಕ್ಕಮ್ಮ, ಖಜಾಂಚಿ ಶೈಲಜ ಹಾಗೂ ಸಂಘದ ಸದಸ್ಯರು ಹಾಜರಿದ್ದರು.