ಮಡಿಕೇರಿ, ಸೆ. 5: ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ನೀಡಿ ಏಡೀಸ್ ಲಾರ್ವಾ ಸಮೀಕ್ಷೆ ಕೈಗೊಳ್ಳುತ್ತಿದ್ದಾರೆ, ಏಡೀಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ಗುರುತಿಸಿ ಸಾರ್ವಜನಿಕರಲ್ಲಿ ಲಾರ್ವಾ ಉತ್ಪತ್ತಿ ತಾಣಗಳ ನಿರ್ಮೂಲನೆಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ. ಗ್ರಾಮಾಂತರ ಮತ್ತು ನಗರ/ ಪಟ್ಟಣ ಪ್ರದೇಶಗಳಲ್ಲಿ ಪ್ರಮುಖ ಸ್ಥಳಗಳ ಪರಿಸರದಲ್ಲಿ ಬಿಸಾಡಿದ ಮಳೆನೀರು ಸಂಗ್ರಹವಾಗುವಂತಹ ಘನ ತ್ಯಾಜ್ಯ ವಸ್ತುಗಳಾದ ಪ್ಲಾಸ್ಟಿಕ್ ವಸ್ತುಗಳು, ಎಳನೀರಿನ ಚಿಪ್ಪುಗಳು, ಗಾಜಿನ ವಸ್ತುಗಳು, ಹಳೆಯ ಟೈರುಗಳು ಇತ್ಯಾದಿಗಳನ್ನು ವಾರಕ್ಕೊಮ್ಮೆ ವಿಲೇವಾರಿ ಮಾಡಿ, ಸೊಳ್ಳೆಗಳು ಉತ್ಪತ್ತಿಯಾಗದಂತೆ ಆರೋಗ್ಯ ಶಿಕ್ಷಣ ನೀಡಲು ಮತ್ತು ಎಲ್ಲಾ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸಮನ್ವಯದೊಂದಿಗೆ ಅಗತ್ಯ ಕ್ರಮವಹಿಸಲು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೂಚಿಸಿ ಕ್ರಮವಹಿಸಲಾಗಿದೆ.

ಕೊಡಗು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಈಗಾಗಲೇ ಡೆಂಗ್ಯೂ ಜ್ವರ ಪ್ರಕರಣಗಳು ವರದಿಯಾಗಿರುವದರಿಂದ ಇವುಗಳ ಅಗತ್ಯ ಮುಂಜಾಗ್ರತಾ ಮತ್ತು ನಿಯಂತ್ರಣ ಕ್ರಮ ಅನುಷ್ಠಾನಗೊಳಿಸುವಂತೆ ಎಲ್ಲಾ ಪ್ರಾಥಮಿಕ/ ಸಮುದಾಯ ಆರೋಗ್ಯ ಕೇಂದ್ರಗಳಿಗೆ, ಜಿಲ್ಲಾ ಆಸ್ಪತ್ರೆ ಮತ್ತು ಸಾರ್ವಜನಿಕ ಆಸ್ಪತ್ರೆ ಗಳಿಗೆ ಸುತ್ತೋಲೆ ಹೊರಡಿಸಿ ಕ್ರಮವಹಿಸಲು ಸೂಚಿಸಲಾಗಿದೆ.

ಕೊಡಗು ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರದ ಅಗತ್ಯ ಬೆಂಬಲಾತ್ಮಕ ಚಿಕಿತ್ಸೆಯ ಔಷಧಗಳನ್ನು ದಾಸ್ತಾನಿರಿಸಿಕೊಳ್ಳಲಾಗಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳ ಹೆಚ್ಚಿನ ಉನ್ನತ ಚಿಕಿತ್ಸೆಗೆ ಅನುಕೂಲವಾಗುವಂತೆ ರೆಪರಲ್ ಆಸ್ಪತ್ರೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡುವಂತೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಮೋಹನ್ ತಿಳಿಸಿದ್ದಾರೆ.

ಸ್ಪಷ್ಟನೆ

‘ಡೆಂಗ್ಯೂಗೆ ಮಹಿಳೆ ಬಲಿ’ ಮತ್ತು ‘ಡೆಂಘೀ: ಮಹಿಳೆ ಸಾವು’ ಎಂಬ ವರದಿಗಳು ಪ್ರಕಟವಾಗಿವೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳು ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸೋಮವಾರಪೇಟೆ ಇವರುಗಳು ಇಲಾಖೆಯ ಆರೋಗ್ಯ ಸಹಾಯಕರ ತಂಡದೊಂದಿಗೆ ಸ್ಥಳ ಭೇಟಿ ನೀಡಿ ವರದಿಯಾದ ಪ್ರಕರಣದ ಬಗ್ಗೆ ಪರಿಶೀಲನೆ ಮಾಡಲಾಗಿದೆ.

ಕುಶಾಲನಗರದ ಕೆಎಚ್‍ಬಿ. ಕಾಲೋನಿಯ 43 ವರ್ಷದ ಮಹಿಳೆ ಒಬ್ಬರಿಗೆ ಜ್ವರ, ವಾಂತಿ ಮುಂತಾದ ರೋಗ ಲಕ್ಷಣ ಇದ್ದುದರಿಂದ ಕುಶಾಲನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಮಡಿಕೇರಿ ಜಿಲ್ಲಾ ಆಸ್ಪತ್ರೆ ಇಲ್ಲಿ ಚಿಕಿತ್ಸೆ ಪಡೆದು ಮೈಸೂರು ಅಪೋಲೋ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿದ್ದಾರೆ. ರೋಗಿಯು ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ. ಅಪೋಲೋ ಆಸ್ಪತ್ರೆ ಮೈಸೂರು ವೈದ್ಯರು ರೋಗಿಯ ಮರಣದ ವರದಿಯಲ್ಲಿ ‘ಬಹು ಅಂಗಾಂಗ ವೈಪಲ್ಯ ಮತ್ತು ಸೆಪ್ಸಿಸ್’ ಎಂದು ಕಾರಣ ನಮೂದಿಸಿರುತ್ತಾರೆ. ಅಲ್ಲದೆ ಡೆಂಗ್ಯೂ ಜ್ವರ ಪತ್ತೆಯಾಗಿಲ್ಲ ಎಂದು ವರದಿ ನೀಡಿರುತ್ತಾರೆ.

ಆದ್ದರಿಂದ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕರಿಗೆ ಅನಗತ್ಯ ಭಯ, ಆತಂಕ, ಗೊಂದಲ ನಿವಾರಿಸಲು ಜಿಲ್ಲಾ ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಎಂ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.